ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಚಿವ ರಮಾನಾಥ ರೈ ಸೂಚನೆ

ಮ0ಗಳೂರು: ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಸೂಚಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಅಧಿಕಾರಿಗಳ, ದಲಿತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳು ಸಮಾಜಕ್ಕೆ ಇನ್ನಷ್ಟು ಪಸರಿಸಲು ಅವರ ಜಯಂತಿಯು ಪರಿಣಾಮಕಾರಿಯಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಮಹಾನಗರಪಾಲಿಕೆ ಹಾಗೂ ವಿವಿಧ ಇಲಾಖೆಗಳು ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯ ದಲಿತ ಸಮುದಾಯದ ದೀರ್ಘಕಾಲದ ಬೇಡಿಕೆಯಾದ ಮಂಗಳೂರು ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇದ್ದ ಎಲ್ಲಾ ತೊಡಕುಗಳು ನಿವಾರಣೆಯಾಗಿದೆ. ರಾಜ್ಯ ಸಚಿವ ಸಂಪುಟ ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅತಿಶೀಘ್ರವೇ ಮಂಗಳೂರಿನಲ್ಲಿ ಅಂಭೇಡ್ಕರ್ ಭವನ ನಿರ್ಮಾಣವಾಗಲಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.

ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಮಾತನಾಡಿ, ಅಂಬೇಡ್ಕರ್ ಜಯಂತಿ ಪ್ರಯಕ್ತ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಮೆರವಣಿಗೆ ನಡೆಯಲಿದೆ. ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಸರಕಾರಿ ನೌಕರರು ಭಾಗವಹಿಸಲು ಸುತ್ತೋಲೆ ಹೊರಡಿಸಲಾಗುವುದು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಅಂಬೇಡ್ಕರ್ ಜಯಂತಿ ನಡೆಸಲು ಜಿ.ಪಂ. ಮೂಲಕ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಕುಮಾರ್, ಮೂಡಾ ಆಯುಕ್ತ ಮುಹಮ್ಮದ್ ನಝೀರ್, ನಗರಪಾಲಿಕೆ ಜಂಟಿ ಆಯುಕ್ತ ಗೋಪಾಲಕೃಷ್ಣ, ವಿವಿಧ ಇಲಾಖೆ ಅಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.

Leave a Reply