ಗ್ರಾ.ಪಂ.ಗಳಿಂದ ಉಚಿತ ಟ್ಯಾಂಕರ್ ನೀರು: ಜಿ.ಪಂ. ಅಧ್ಯಕ್ಷರ ಸೂಚನೆ

ಮಂಗಳೂರು: ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಗ್ರಾಮ ಪಂಚಾಯತ್‍ಗಳು ಸಾರ್ವಜನಿಕರಿಂದ ಯಾವುದೇ ದರ ವಸೂಲಿ ಮಾಡದೇ, ಉಚಿತವಾಗಿಯೇ ನೀರು ಸರಬರಾಜು ಮಾಡಲು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ.

kdp-mangalore-20160511

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್‍ಗಳ ಮೂಲಕ ಸರಬರಾಜಾಗುವ ಟ್ಯಾಂಕರ್ ನೀರಿಗೆ ದರ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಜನತೆಗೆ ಕುಡಿಯುವ ನೀರು ಒದಗಿಸುವುದು ಗ್ರಾಮ ಪಂಚಾಯತ್‍ಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ದರ ವಸೂಲಿ ಮಾಡದೇ ಕುಡಿಯುವ ನೀರು ಒದಗಿಸಲು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸೂಚಿಸಿದರು.
ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಂಡು ಪೂರ್ಣಗೊಳಿಸಲು ಸೂಚಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಗ್ರಾಮ ಪಂಚಾಯತ್ ಪಿಡಿಓಗಳು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಗೆ ಸರಿಯಾಗಿ ಸ್ಪಂದಿಸಬೇಕು. ಕುಡಿಯುವ ನೀರಿನ ಒದಗಿಸುವಲ್ಲಿ ಯಾವುದೇ ವಿಳಂಭವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳಬೇಕಾದ ಕೆಲಸಗಳನ್ನು ತ್ವರಿತವಾಗಿ ಕೈಗೊಂಡು ಮಳೆಗಾಲಕ್ಕೆ ಮುಂಚಿತವಾಗಿ ಪೂರ್ಣಗೊಳಿಸಬೇಕು. ಪ್ರತೀ ಗ್ರಾಮ ಪಂಚಾಯತ್‍ಗಳಲ್ಲಿ 50 ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕು. ನರೇಗಾ ಯೋಜನೆಯಡಿ ಕೈಗೆತ್ತಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಈ ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಬೇಕು ಎಂದರು.
ವಸತಿ ಯೋಜನೆಯ ಫಲಾನುಭವಿಗಳನ್ನು ಕಡ್ಡಾಯವಾಗಿ ಗ್ರಾಮಸಭೆಗಳಲ್ಲಿ ಆಯ್ಕೆ ಮಾಡಬೇಕು. ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮಸಭೆಯ ವೀಡಿಯೋ ದೃಶ್ಯವನ್ನು ಪರಿಶೀಲಿಸಿದ ಬಳಿಕವೇ ವಸತಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಅನುಮೋದಿಸಬೇಕು. ಸಾರ್ವಜನಿಕ ಕುಡಿಯುವ ನೀರಿನ ಸ್ಥಾವರಗಳ 500 ಮೀಟರ್ ವ್ಯಾಪ್ತಿಯಲ್ಲಿ ಇತರೆ ಬೋರ್‍ವೆಲ್‍ಗಳನ್ನು ತೋಡಲು ಅವಕಾಶವಿಲ್ಲ ಎಂದು ಮುಖ್ಯ ಕಾರ್ಯನಿರ್ವಹಾಣಧಿಕಾರಿಗಳು ತಿಳಿಸಿದರು.
ಆಸ್ಪತ್ರೆಗಳಲ್ಲಿ ದರಪಟ್ಟಿ: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ವಿವಿಧ ಸೇವೆಗಳ ದರಪಟ್ಟಿಯನ್ನು ಪ್ರದರ್ಶಿಸಬೇಕೆಂಬ ನಿಯಮವಿದ್ದರೂ, ಜಿಲ್ಲೆಯ ಹಲವು ಆಸ್ಪತ್ರೆಗಳಲ್ಲಿ ದರಪಟ್ಟಿಯನು ನಮೂದಿಸಿರುವುದು ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ವಾರದೊಳಗೆ ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅವರು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣರಾವ್, ದರಪಟ್ಟಿ ಪ್ರದರ್ಶಿಸದ ಆಸ್ಪತ್ರೆಗಳ ಲೈಸನ್ಸ್ ನವೀಕರಿಸದೆ, ತಡೆಹಿಡಿಯಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ರೇಷ್ಮೆ ಇಲಾಖೆಯು ವಿವಿಧ ಯೋಜನೆಗಳಲ್ಲಿ ಸಾಕಷ್ಟು ಖರ್ಚು ಮಾಡುತ್ತಿದ್ದರೂ, ಜಿಲ್ಲೆಯಲ್ಲಿ ರೇಷ್ಮೆ ಕೃಷಿಯಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ಇದಲ್ಲದೇ ಕಳೆದ ವರ್ಷ ಪುತ್ತೂರು ಎಪಿಎಂಸಿಗೆ ಜಿಲ್ಲಾ ಪಂಚಾಯತ್‍ನಿಂದ 10 ಲಕ್ಷ ರೂ. ಅನುದಾನ ನೀಡಲಾಗಿದ್ದರೂ, ಅನುದಾನ ಬಳಸದೇ ವ್ಯರ್ಥಪಡಿಸಿರುವುದಕ್ಕೆ ಅವರು ಎಪಿಎಂಸಿ ಅಧಿಕಾರಿ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದರು.
ಕಾರ್ಮಿಕರ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿರುವುದರ ಬಗ್ಗೆ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಆರೋಗ್ಯ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಿವರಣೆ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ವಿಮಾ ಕಂಪೆನಿಗಳು ಹಳೆಯ ಬಿಲ್ಲುಗಳನ್ನು ಆಸ್ಪತ್ರೆಗಳಿಗೆ ಪಾವತಿಸಲು ಬಾಕಿ ಇಟ್ಟಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಶ್ರೀವಿದ್ಯಾ ಸೂಚಿಸಿದರು.

Leave a Reply

Please enter your comment!
Please enter your name here