ಮಂಗಳೂರು : ಅಂಕಗಳಿಕೆಯೊಂದಿಗೆ ಆರೋಗ್ಯ ಜಾಗೃತಿಯೂ ಪ್ರಾಮುಖ್ಯ: ಸಿಇಓ

ಮಂಗಳೂರು: ಶಿಕ್ಷಣ ಸಂಸ್ಥೆಗಳು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅಂಕ ಗಳಿಕೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಅವರ ಆರೋಗ್ಯ ರಕ್ಷಣೆಯ ಜಾಗೃತಿ ಮೂಡಿಸುವುದು ಅಷ್ಟೇ ಪ್ರಾಮುಖ್ಯವಾಗಿದೆ.  ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ವಿವಿಧ ರೋಗಗಳು ಹೆಚ್ಚಾಗಿ ಕಂಡುಬರುತ್ತಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಅವರು ಬುಧವಾರ ನಗರದ ಬದ್ರಿಯಾ ಪದವಿಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜರುಗಿದ ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮಾತ್ರೆ ವಿತರಿಸಿ ಮಾತನಾಡಿದರು. ಅನೀಮಿಯಾದಂತಹ ರೋಗಗಳು ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಇದಲ್ಲದೇ, ಮಾರಕ ರೋಗಿಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿರುವುದು ಕಳವಳಕಾರಿಯಾಗಿದೆ. ಆರೋಗ್ಯವಂತ ಜನಸಂಖ್ಯೆಯು ದೇಶದ ಆಸ್ತಿಯಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆಯು ದೇಶದ ಅತಿದೊಡ್ಡ ಕಾರ್ಯಕ್ರಮವಾಗಿದೆ. ದೇಶದ ಆರೋಗ್ಯ ರಕ್ಷಣೆಯಲ್ಲಿ ಇದು ಮಹತ್ತರವಾಗಿದ್ದು, ಇದರಲ್ಲಿ ಸರ್ವರ ಸಹಕಾರ ಅಗತ್ಯವಿದೆ. ಶಿಕ್ಷಣ ಇಲಾಖೆ ಮತ್ತು ಶಿಶು ಅಭಿವೃದ್ಧಿ ಇಲಾಖೆಗಳ ಪಾತ್ರ ಇದರಲ್ಲಿ ಅತಿಮುಖ್ಯವಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಜಂತುಹುಳು ಭಾದೆಯಿಂದ ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಜಂತುಹುಳಗಳು ಮಕ್ಕಳ ರಕ್ತವನ್ನು ಹೀರಿ ರಕ್ತಹೀನತೆ ಹಾಗೂ ಪೌಷ್ಠಿಕಾಂಶವನ್ನು ಹೀರಿ ಅಪೌಷ್ಠಿಕತೆ ಉಂಟಾಗುತ್ತದೆ. ಇದರಿಂದ ಮಕ್ಕಳು ರೋಗಗ್ರಸ್ಥರಾಗಿ, ಅವರ ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಕುಂಠಿತವಾಗಿ ಅವರ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು. ಎಲ್ಲಾ ಹೆತ್ತವರು ತಮ್ಮ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ಕಡ್ಡಾಯವಾಗಿ ನೀಡಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1ರಿಂದ 19 ವರ್ಷ ವಯಸ್ಸಿನ 416312 ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಗುರು ಇಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬದ್ರಿಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಇಸ್ಮಾಯಿಲ್ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮಯ್ಯ ಮತ್ತಿತರರು ಇದ್ದರು.

ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ. ಸಿಕಂದರ್ ಪಾಷಾ ವಂದಿಸಿದರು. ಉಪನ್ಯಾಸಕ ಯೂಸುಫ್ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಜಂತುಹುಳ ನಿವಾರಣೆಯ ಅಲ್ಬೆಂಡಝೋಲ್ ಮಾತ್ರೆಗಳನ್ನು ವಿತರಿಸಲಾಯಿತು.

Leave a Reply