ಮ0ಗಳೂರು: ಜಿಲ್ಲೆಯಲ್ಲಿ ಅಭೂತಪೂರ್ವ ಭದ್ರತೆ- ಕಾನೂನು ಕೈಗೆತ್ತಿಕೊಂಡರೆ ಉಗ್ರ ಕ್ರಮ: ಡಿಸಿ ಎಚ್ಚರಿಕೆ

ಮ0ಗಳೂರು : ಜಿಲ್ಲೆಯಲ್ಲಿ ನ. 13 ರಂದು ಪ್ರಸ್ತಾವಿತ ಬಂದ್ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಉನ್ನತ ಮಟ್ಟದ ಸಭೆಯು ಬುಧವಾರ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು.
ಪೊಲೀಸ್ ಆಯುಕ್ತ ಎಸ್.ಮುರುಗನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶರಣಪ್ಪ , ಹಿರಿಯ ಪೊಲೀಸ್ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಶೀಲ್ದಾರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಕಾನೂನನ್ನು ಯಾರೇ ಕೈಗೆತ್ತಿಕೊಂಡರೂ ಅವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು. ಅಭೂತಪೂರ್ವ ಭದ್ರತೆಯನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುವುದು. ಸಾರ್ವಜನಿಕ ಶಾಂತಿ ನೆಮ್ಮದಿಗೆ ಯಾವುದೇ ಕಾರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದರು. ನವೆಂಬರ್ 13 ರಂದು ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಅವಕಾಶವಿಲ್ಲ. ಈಗಾಗಲೇ ಅನುಮತಿ ನೀಡಿರುವ ಸಮಾರಂಭಗಳ ಅನುಮತಿಯನ್ನು ಹಿಂದೆಗೆಯಲಾಗುವುದು. ಅಂದು ಬಾರ್ ಮತ್ತು ಮದ್ಯದಂಗಡಿ ಸೇರಿದಂತೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗುವುದು, ಸೂಕ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುವುದು ಎಂದರು.
13 ರಂದು ಎಲ್ಲಾ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿದ್ದು , ರಜೆಗೆ ಅವಕಾಶವಿಲ್ಲ. ಈಗಾಗಲೇ ರಜೆಯಲ್ಲಿ ತೆರಳಿರುವ ಸರಕಾರಿ ನೌಕರರಿಗೆ ರಜೆ ರದ್ದುಪಡಿಸಿ, ಕರ್ತವ್ಯಕ್ಕೆ ಕರೆಸುವಂತೆ ಜಿಲ್ಲಾಧಿಕಾರಿಗಳು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಸರಕಾರಿ ವಾಹನಗಳನ್ನೂ ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಅಗ್ನಿಶಾಮಕ ಹಾಗೂ ಆಂಬ್ಯುಲೆನ್ಸ್ ವಾಹನಗಳನ್ನು ಸನ್ನದ್ಧವಾಗಿರಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಇಬ್ರಾಹಿಂ, ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್‍ಗಳು ಮುಂಜಾಗರೂಕತಾ ಸಭೆ ಕರೆಯುವಂತೆ ತಿಳಿಸಿದರು.
ಪೊಲೀಸ್ ಆಯುಕ್ತ ಎಸ್.ಮುರುಗನ್ ಮಾತನಾಡಿ, ಪೊಲೀಸ್ ಇಲಾಖೆಯೊಂದಿಗೆ ಇತರ ಇಲಾಖೆಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಕೈ ಜೋಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಡಿ.ಸಿ.ಪಿ. ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಲಕೃಷ್ಣ, ಉಪವಿಭಾಗಾಧಿಕಾರಿಗಳಾದ ಡಾ.ಅಶೋಕ್, ಸತೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Please enter your comment!
Please enter your name here