ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

Spread the love

ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ಮಂಗಳೂರು : ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

 ಬಂಧಿತನನ್ನು ಬಂಟ್ವಾಳ ಅಮ್ಮುಂಜೆ ನಿವಾಸಿ ಮೊಹಮ್ಮದ್ ಇಝದ್ದೀನ್(32) ಎಂದು ಗುರುತಿಸಲಾಗಿದೆ.

ಸೋಮವಾರದಂದು ಕಂಕನಾಡಿ ನಗರ ವ್ಯಾಪ್ತಿಯ ಪಂಪ್ ವೆಲ್ ವೃತ್ತ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ  ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಇಝದ್ದೀನನ್ನು ಪಡೆದುಕೊಂಡು ಆತನಿಂದ 200 ಗ್ರಾಂ  ಗಾಂಜಾ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ಈ ಗಾಂಜಾವನ್ನು ಆರೋಪಿಯು ಕೇರಳ ರಾಜ್ಯದ ಕುಂಜತ್ತೂರು ಬಳಿಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿರುವುದಾಗಿದೆ. ಆರೋಪಿ ಮೊಹಮ್ಮದ್ ಇಝದ್ದೀನ್ ಎಂಬಾತನ ವಿರುದ್ಧ  ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣವೊಂದು ದಾಖಲಾಗಿತ್ತು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ  ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ   ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love