21 ರಂದು ಜಿಲ್ಲೆಗೆ ಮುಖ್ಯಮಂತ್ರಿ: ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

ಮ0ಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 21ರಂದು ಜಿಲ್ಲೆಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.

ಜಿಲ್ಲಾಧಿಕಾರಿಗಳು ಮಾತನಾಡಿ, ಮುಖ್ಯಮಂತ್ರಿಗಳು ಏ.21ರಂದು ಮಂಗಳೂರಿಗೆ ಆಗಮಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ನಿಟ್ಟಿನಲ್ಲಿ ಕಾಮಗಾರಿಗಳು ಪೂರ್ಣಗೊಂಡು ಆಯಾ ಇಲಾಖೆಗೆ ಹಸ್ತಾಂತರವಾಗಿರುವ ಕಾಮಗಾರಿಗಳನ್ನು ಅಥವಾ ಆಡಳಿತಾತ್ಮಕ ಮಂಜೂರುಗೊಂಡಿರುವ ಹೊಸ ಕಾಮಗಾರಿಗಳಿಗೆ ಮಾತ್ರ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಎಲ್ಲಾ ಇಲಾಖೆಗಳು ಕಳೆದ ಸಾಲಿನ ಪ್ರಗತಿ ವಿವರಗಳನ್ನು ನೀಡಬೇಕು. ಯಾವುದೇ ಪ್ರಗತಿ ಕುಂಠಿತವಾಗಿದ್ದರೆ, ಆಯಾ ಇಲಾಖಾ ಅಧಿಕಾರಿಗಳನ್ನೇ ಹೊಣೆಗಾರನಾಗಿಸಲಾಗುವುದು. ಜಿಲ್ಲೆಗೆ ಸಂಬಂಧಿಸಿದಂತೆ ಸರಕಾರದ ಅನುಮೋದನೆಗೆ ಬಾಕಿ ಇರುವ ಪ್ರಮುಖ ಯೋಜನೆ, ವಿಷಯಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಪೊಲೀಸ್ ಹುದ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇರುವ ಬಗ್ಗೆ, ಎಂಡೋಸಲ್ಫಾನ್ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕೇಂದ್ರ ಹಾಗೂ ರಾಜ್ಯದಲ್ಲೇ ಪ್ರಪ್ರಥಮವಾಗಿ ಬುದ್ಧಿಮಾಂದ್ಯರ ಪುನರ್ವಸತಿ ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಮುಖ್ಯಮಂತ್ರಿಯವರಿಗೆ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಎ.ಬಿ. ಇಬ್ರಾಹಿಂ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕುಮಾರ ಸಭೆಯಲ್ಲಿ ಮಾತನಾಡಿ, ಎಲ್ಲಾ ಇಲಾಖೆಗಳು ತಮ್ಮ ಪ್ರಗತಿ ವರದಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ಡಿಸಿಎಫ್ ಡಾ. ಹನುಮಂತಪ್ಪ, ಎಸ್‍ಪಿ ಡಾ. ಶರಣಪ್ಪ, ಡಿಸಿಪಿ ಶಾಂತರಾಜು ಮತ್ತಿತರರು ಇದ್ದರು.

Leave a Reply