ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ; 5 ಮಂದಿ ವಶಕ್ಕೆ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯ ಕಾರನ್ನು ತಡೆದು, ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ನೀಡಿದ ದೂರಿನಂತೆ, ಆ.11ರಂದು ರಾತ್ರಿ ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದ ಕಡೆಗೆ ತೆರಳುತ್ತಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ತಲುಪಿದಾಗ, ಅಲ್ಲಿದ್ದ ಕೆಲವರ ಗುಂಪು ಕಾರನ್ನು ತಡೆದು ನಿಲ್ಲಿಸಿ, ಕಾರಿನಲ್ಲಿದ್ದ ಅಪ್ರಾಪ್ತ ಬಾಲಕಿಯ ಬಗ್ಗೆ ವಿಚಾರಿಸಿ, ಶೈಕ್ ಮುಕ್ತಾರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 106/2026ರಂತೆ BNSನ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಧನುಷ್ (23), ದಿನೇಶ್ (45), ಪೂರ್ಣಕ್ಷ ಬಿ. (40), ಸೂರಜ್ (25) ಹಾಗೂ ರಂಜಿತ್ ಬಂಡಾರಿ (29) ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ಪ್ರತಿದೂರು
ಇದೇ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಪ್ರತ್ಯೇಕ ದೂರು ನೀಡಿದ್ದು, ಶೈಕ್ ಮುಕ್ತಾರ್ (52) ಎಂಬಾತ ತನ್ನ ಮಗಳನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ZERO FIR 03/2026ರಂತೆ BNS ಕಲಂ 137(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.













