ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ಮನವೊಲಿಸಿ ಪದೇ ಪದೇ ಅತ್ಯಾಚಾರ ಎಸಗಿ, ಆಕೆಯ ನಗ್ನ ಚಿತ್ರಗಳನ್ನು ಸಂಗ್ರಹಿಸಿಕೊಂಡು ವೈರಲ್ ಮಾಡುವುದಾಗಿ ಹಾಗೂ ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) ತೀರ್ಪು ನೀಡಿದೆ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 130/2025 ಪ್ರಕರಣದ ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ (20), ದೇವಿನಗರ, ಕುಂಜತ್ತಬೈಲ್, ಮಂಗಳೂರು ನಿವಾಸಿ. ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) ನ್ಯಾಯಾಧೀಶ ಮಾನು ಕೆ.ಎಸ್. ಅವರು ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 64(2)(m), 77, ಪೋಕ್ಸೋ ಕಾಯ್ದೆಯ ಕಲಂ 6 ಹಾಗೂ 15 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(E) ಅಡಿಯಲ್ಲಿ ಆರೋಪಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿ ಶಿಕ್ಷೆ ಪ್ರಕಟಿಸಿದ್ದಾರೆ.
ಪ್ರಕರಣದ ವಿವರದಂತೆ, ಆರೋಪಿ 2024ರ ಫೆಬ್ರವರಿಯಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ಮನವೊಲಿಸಿ, ಮಂಗಳೂರಿನ ಶಕ್ತಿನಗರದ ಚಾಲುಕ್ಯ ಬಾರ್ ಸಮೀಪದ ಬಾಡಿಗೆ ಮನೆಯಲ್ಲಿ 2024ರ ಸೆಪ್ಟೆಂಬರ್ ತಿಂಗಳಲ್ಲಿ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆಇಬಿ ಎದುರಿನ ಮನೆಯಲ್ಲಿ 2024ರ ನವೆಂಬರ್ನಿಂದ 2025ರ ಜೂನ್ ತಿಂಗಳವರೆಗೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದಲ್ಲದೆ, ಬಾಲಕಿ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಕರೆ ಮಾಡಿ ಅದರ ಸ್ಕ್ರೀನ್ಶಾಟ್ಗಳನ್ನು ತನ್ನ ಮೊಬೈಲ್ನಲ್ಲಿ ಸಂಗ್ರಹಿಸಿಕೊಂಡಿದ್ದ ಆರೋಪಿ, ಮುಂದೆ ದೈಹಿಕ ಸಂಪರ್ಕಕ್ಕೆ ಬರದಿದ್ದರೆ ಆ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಅಲ್ಲದೆ, ಬಾಲಕಿ, ಆಕೆಯ ತಾಯಿ ಹಾಗೂ ಅಕ್ಕನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣದ ತನಿಖೆಯನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ಟಿ.ಡಿ. ನಾಗರಾಜ್ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.
ನ್ಯಾಯಾಲಯವು ಆರೋಪಿಗೆ ಪೋಕ್ಸೋ ಕಾಯ್ದೆಯ ಕಲಂ 6 ಹಾಗೂ ಬಿಎನ್ಎಸ್ ಕಲಂ 64(2)(m) ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ ವಿಧಿಸಿದೆ. ಅಲ್ಲದೆ, ಬಿಎನ್ಎಸ್ ಕಲಂ 77, ಪೋಕ್ಸೋ ಕಲಂ 15 ಹಾಗೂ ಐಟಿ ಕಾಯ್ದೆಯ ಕಲಂ 66(E) ಅಡಿಯಲ್ಲಿ ತಲಾ ಒಂದು ವರ್ಷದ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಆದೇಶಿಸಿದೆ.













