ಈಗಾಗಲೇ 65 ಸಾವಿರ ಗಿಡಗಳನ್ನು ನೆಡಲಾಗಿದೆ: ಜಿ.ಪಂ. ಸಿಇಓ ಡಾ. ಕುಮಾರ್

Spread the love

ಈಗಾಗಲೇ 65 ಸಾವಿರ ಗಿಡಗಳನ್ನು ನೆಡಲಾಗಿದೆ: ಜಿ.ಪಂ. ಸಿಇಓ ಡಾ. ಕುಮಾರ್

ಮಂಗಳೂರು: ಪ್ರಸಕ್ತ ಸಾಲಿನಿಂದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಠ 500 ಗಿಡಗಳನ್ನು ನೆಟ್ಟು ಅವುಗಳ ಪೋಷಣೆ ಮಾಡುವ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ಅದರಂತೆ ಈಗಾಗಲೇ 65 ಸಾವಿರ ಗಿಡಗಳನ್ನು ನೆಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಅವರು ಸೆಪ್ಟೆಂಬರ್ 3ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಅಭಿಯಾನ-2021 ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, ರಾಜ್ಯಕ್ಕೇ ಮಾದರಿಯಾಗಿದೆ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಗುತ್ತಿದೆ ಎಂದವರು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಜಯಕರ ಭಂಡಾರಿ ಜೀವವೈವಿಧ್ಯದ ಪ್ರಸಕ್ತ ವರ್ಷದ ಧ್ಯೇಯವಾಕ್ಯ “ಪ್ರಕೃತಿಗೆ ಒದಗಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಾವೂ ಕೂಡ ಪಾಲುದಾರರಾಗಿದ್ದೇವೆ” ಎಂಬ ವಿಷಯದ ಬಗ್ಗೆ ಮಾತನಾಡಿ, ಜೀವವೈವಿಧ್ಯತೆಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ, ಮನುಷ್ಯ ಇನ್ನು ಮುಂದಾದರೂ ಪ್ರಕೃತಿಯ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರಾದೇಶಿಕ ಉಪವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನಟಾಲ್ಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಸಭೆಯಲ್ಲಿ ಉಪಸ್ಥಿತರಿದ್ದರು.

ಅತಿಥಿಗಳಾಗಿ ಪಿಲಿಕುಳ ನಿಸರ್ಗಧಾಮದ ಸಸ್ಯಶಾಸ್ತ್ರಜ್ಞ ಡಾ. ಸೂರ್ಯಪ್ರಕಾಶ್ ಶೆಣೈ, ನಿವೃತ್ತ ಸಸ್ಯಶಾಸ್ತ್ರ ಪ್ರಾಧ್ಯಾಪಕರು ಹಾಗೂ ಸಂಶೋಧಕ ಡಾ. ದೇವಿಪ್ರಸಾದ್, ಉಳ್ಳಾಲದ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ರವಿರಾಜ ಶೆಟ್ಟಿ ಜಿ. ಅವರ ಸಾಧನೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜೈವಿಕ ಇಂಧನದ ಸಸಿಗಳಾದ ಸೀಮರೂಬ ಮತ್ತು ಹೊಂಗೆ ಗಿಡಗಳನ್ನು ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿತರಿಸಲಾಯಿತು.


Spread the love