ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ- ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಆದೇಶ

Spread the love

ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ- ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಆದೇಶ

ಮಂಗಳೂರು : ಪ್ರಸ್ತುತ ಸಾಲಿನಲ್ಲಿ ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು ಆಚರಿಸುತ್ತಿದ್ದು, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾಧೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ| ರಾಜೇಂದ್ರ ಕೆ.ವಿ ಅವರು ಈ ಕೆಳಕಂಡಂತೆ ಮಾರ್ಗಸೂಚಿಗಳನ್ನು ಪಾಲಿಸಲು ಆದೇಶಿಸಿರುತ್ತಾರೆ.

ಜಿಲ್ಲೆಯಾದ್ಯಂತ ಅಕ್ಟೋಬರ್ 29 ರಂದು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಸಮಯದಲ್ಲಿ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೊವೀಡ್-19 ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು.

ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.

ಮೇಲ್ಕಂಡ ನಿರ್ದೇಶನವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love