ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Spread the love

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಉಡುಪಿ: ಕನ್ನಡ ನಾಡು ವಿವಿಧ ಧರ್ಮಗಳ ಮತ್ತು ಸಂಸ್ಕೃತಿಗಳ ತವರೂರಾಗಿದ್ದು ಸಾಮರಸ್ಯ ಮತ್ತು ಸಹಬಾಳ್ವೆ ಕನ್ನಡ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಅವರು ಭಾನುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 65 ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡ ನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ. ಕನ್ನಡವೆಂದರೆ ಬರಿ ನುಡಿಯಲ್ಲ ಅದು ಜೀವನದ ಅರ್ಥ ಎಂಬ ಕವಿವಾಣಿಯಂತೆ ಇಲ್ಲಿನ ಭಾಷೆ, ಪರಂಪರೆ, ಕಲೆ ಮತ್ತು ಸಾಹಿತ್ಯ ಸಂಸ್ಕೃತಿಗಳೆಲ್ಲವೂ ಕನ್ನಡಮಯವೇ. ಇಲ್ಲಿ ಆಳಿದ ನೂರಾರು ರಾಜಮನೆತನಗಳು, ಕನ್ನಡ ನಾಡಿನ ಶಿಲ್ಪ, ಸಂಗೀತ, ನೃತ್ಯ, ನಾಟಕ, ಸಾಹಿತ್ಯ ಪರಂಪರೆಗಳನ್ನು ಪೋಷಿಸಿವೆ. ನಾಡಿನ ಪ್ರತಿಯೊಬ್ಬ ಪ್ರಜೆಯೂ ಭಾವೈಕತೆ, ನಾಡಪ್ರೇಮ ಮತ್ತು ದೇಶಪ್ರೇಮವನ್ನು ಹೊಂದಿ ಈ ನಾಡಿನ ಸಮಗ್ರ ಅಭಿವೃದ್ಧಿಗೆ ತಮ್ಮ ಸಮಯವನ್ನು ಮೀಸಲಿಡಲು ಶ್ರಮಿಸಬೇಕು ಎಂದರು.

ಜಿಲ್ಲೆಯ ಅಭಿವೃದ್ಧಿಯ ಕುರಿತು ಬೆಳಕು ಚೆಲ್ಲಿದ ಜಿಲ್ಲಾಧಿಕಾರಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಷ್ಠಿತ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಪ್ರಮಾಣ ಪತ್ರದ ಮಾನ್ಯತೆಯು ನಮ್ಮ ಜಿಲ್ಲೆಯ ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್ ಗೆ ದೊರೆತಿರುವುದರಿಂದ ಉಡುಪಿ ಜಿಲ್ಲೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರರುವುದು ಹೆಮ್ಮೆಯ ವಿಚಾರ ಎಂದರು.

ಜಿಲ್ಲೆಯ ಬೈಂದೂರು ತಾಲೂಕಿನ ಬೈಂದೂರು ಯಡ್ತರೆ ಹಾಗೂ ಪಡುವರಿ ಗ್ರಾಮಗಳನ್ನು ಪಟ್ಟಣ ಪಂಚಾಯತ್ ಆಗಿ ಸರಕಾರ ಮೇಲ್ದರ್ಜೆಗೇರಿಸಿರುವುದು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಲ್ಲಿ ಹೊಸ ಮೈಲಿಗಲ್ಲಾಗಿದೆ ಎಂದ ಜಿಲ್ಲಾಧಿಕಾರಿ ಉಡುಪಿ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸಲು ಸರಕಾರದಿಂದ ಅನುಮತಿ ದೊರೆತಿರುವುದು ನಿಜಕ್ಕೂ ಜಿಲ್ಲೆಯ ಜನತೆಗೆ ಹರ್ಷದ ಸಂಗತಿ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ 36 ಸಾಧಕರಿಗೆ ಹಾಗೂ 4 ಸಂಘ-ಸಂಸ್ಥೆಗಳಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಇಬ್ಬರು ವಿದ್ಯಾರ್ಥಿಗಳಾದ ಸ್ಪೂರ್ತಿ ಮತ್ತು ರಶ್ಮೀತಾ ಇವರಿಗೆ ತಲಾ ಒಂದು ಲಕ್ಷರೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ನಗರ ಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ದೀ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ಇತರರು ಉಪಸ್ಥಿತರಿದ್ದರು.


Spread the love