ಕರಾವಳಿಯಾದ್ಯಂತ ವರುಣನ ಆರ್ಭಟ: ಪ್ರವಾಹದ ಭೀತಿ, ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್ ತಂಡ

Spread the love

ಕರಾವಳಿಯಾದ್ಯಂತ ವರುಣನ ಆರ್ಭಟ: ಪ್ರವಾಹದ ಭೀತಿ, ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್ ತಂಡ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿದಿದೆ. ನಿರಂತರ ಮಳೆಯಿಂದ ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಉಜಿರೆ, ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಭಾಗಗಳ ಕೆಲ ರಸ್ತೆಗಳು ಜಲಾವೃತಗೊಂಡಿದ್ದು, ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕೆಲವು ರಸ್ತೆಗಳ ಮೇಲೂ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ನದಿಗಳ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಹಲವು ತೋಟಗಳಿಗೆ ನೀರು ನುಗ್ಗಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ತಗ್ಗು ಪ್ರದೇಶಗಳಲ್ಲಿರುವ ಕೆಲ ಮನೆಗಳಿಗೂ ಮಳೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ.

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಪಾಯದಲ್ಲಿರುವ ಬೆಳ್ತಂಗಡಿ ಹಾಗೂ ಉಜಿರೆ ಭಾಗದ ಕೆಲವು ಪ್ರದೇಶಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಲಾಗಿದೆ. ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಶಾಂತಿಲಾಲ್ ಜಟಿ ಅವರ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯ ಪರಿಶೀಲನೆ ನಡೆಸಿ ರಕ್ಷಣಾ ಕಾರ್ಯ ಆರಂಭಿಸಿದೆ.

ತಗ್ಗು ಪ್ರದೇಶಗಳಲ್ಲಿ ಸಿಲುಕಿರುವ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.


Spread the love
Subscribe
Notify of

0 Comments