
ಕರಾವಳಿಯ ಮೀನುಗಾರರ ಮೇಲೆ ಹಲ್ಲೆ: ಗಂಭೀರವಾಗಿ ಪರಿಗಣಿಸಲು ಸಿಎಂಗೆ ಪ್ರಮೋದ್ ಮಧ್ವರಾಜ್ ಮನವಿ
ಉಡುಪಿ: ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಕನ್ಯಾಕುಮಾರಿಯಿಂದ ನೇರ ಸುಮಾರು 50 ನಾಟಿಕಲ್ ಮೈಲು ದೂರದಲ್ಲಿ ಫೆ.8ರಂದು ಕರ್ನಾಟಕದ ಆಳ ಸಮುದ್ರ ದೋಣಿಗಳು ಮೀನುಗಾರಿಕೆ ಮಾಡುತ್ತಿರುವಾಗ ಅನ್ಯ ರಾಜ್ಯದ ಬೋಟುಗಳು ಕರ್ನಾಟಕದ ಬೋಟುಗಳನ್ನು ಸುತ್ತುವರಿದು ಸೀಸ, ಕಲ್ಲು, ಮರದ ತುಂಡುಗಳಿಂದ ಜಖಂಗೊಳಿಸಿ, ರಾಜ್ಯದ ಮೀನುಗಾರರ ಮೇಲೆ ಹಲ್ಲೆ ಮಾಡಿ, ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ದೋಚಿಕೊಂಡು ಹೋಗಿದ್ದಾರೆ. ಈಗಾಗಲೇ ಆಳ ಸಮುದ್ರ ಮೀನುಗಾರರ ಸಮಿತಿಗಳು ಹಾಗೂ ಸಂಘಗಳು ಈ ಅಮಾನವೀಯ ಕೃತ್ಯವನ್ನು ಉಗ್ರವಾಗಿ ಖಂಡಿಸಿವೆ. ಸಂಬಂಧಪಟ್ಟ ಇಲಾಖೆ ಹಾಗೂ ಸಚಿವರಿಗೂ ಮನವಿ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕದ ಮೀನುಗಾರರಿಗೆ ಆಗಿರುವ ಮಾನಸಿಕ ಕಿರುಕುಳಕ್ಕೆ ಪರಿಹಾರ ಹಾಗೂ ಆರ್ಥಿಕ ನಷ್ಟವನ್ನು ಭರಿಸುವಂತೆ ಮತ್ತು ಮುಂದಿನ ದಿನಗಳಲ್ಲಿ ಕರ್ನಾಟಕದ ಕರಾವಳಿ ಮೀನುಗಾರರಿಗೆ ಸೂಕ್ತ ಭದ್ರತೆ ಒದಗಿಸಿ, ನ್ಯಾಯಯುತವಾಗಿ ಮೀನುಗಾರಿಕೆಗೆ ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಯವರಲ್ಲಿ ಪ್ರಮೋದ್ ಮಧ್ವರಾಜ್ ಮನವಿ ಮಾಡಿದ್ದಾರೆ.