
ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಾಗಾರಿಗೆ ಗುದ್ದಲಿ ಪೂಜೆ
ಉಡುಪಿ: ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆಯನ್ನು ರೂ 70 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ, ಕರಾವಳಿ ಜಂಕ್ಷನ್ನಿಂದ ಮಲ್ಪೆಯವರೆಗಿನ ರಸ್ತೆ ಆಭಿವೃದ್ಧಿ ಬಹುಕಾಲದ ಬೇಡಿಕೆಯಾಗಿದ್ದು ಶೀಘ್ರ ರಸ್ತೆ ನಿರ್ಮಾಣವಾಗಲಿದೆ. ಮಲ್ಪೆ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಮೀನುಗಾರಿಕಾ ಬಂದರು ಹೊಂದಿರುವ ಕಾರಣ ಈ ರಸ್ತೆಯಲ್ಲಿ ಅತಿಯಾದ ವಾಹನ ದಟ್ಟಣೆ ಇತ್ತು. ಕಿರಿದಾದ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿದ್ದವು. ಮಲ್ಪೆ-ಕರಾವಳಿ ಜಂಕ್ಷನ್ ರಸ್ತೆ ವಿಸ್ತರಣೆಯಾದರೆ ಬಂದರಿಲ್ಲಿ ಹೆಚ್ಚಿನ ಅರ್ಥಿಕ ಚಟುವಟಿಕೆಗಳು ಹೆಚ್ಚಾಗಲು ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳು ಮತ್ತಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.
ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಶೀಘ್ರ ರಸ್ತೆ ನಿರ್ಮಾಣವಾಗಲು ಸಹಕಾರ ನೀಡಬೇಕು. ಹಿಂದೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದರಿಂದ ಸಂತೆಕಟ್ಟೆ, ಅಂಬಲಪಾಡಿ ಮತ್ತು ಕಟಪಾಡಿಯಲ್ಲಿ ಸಮಸ್ಯೆಗಳು ಉಂಟಾಗಿವೆ.
ಸರ್ವಿಸ್ ರಸ್ತೆ ಸಹ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲದೆ ವಾಹನ ಸವಾರರಿಗೆ ಅನಾನುಕೂಲವಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರದ ನೆರವಿನಿಂದ ಸಂತೆಕಟ್ಟೆಯಲ್ಲಿ ರೂ 27 ಕೋಟಿ ವೆಚ್ಚದಲ್ಲಿ ಓವರ್ಪಾಸ್ ಕಾಮಗಾರಿ ನಡೆಯುತ್ತಿದ್ದು, ಅಂಬಲಪಾಡಿಯಲ್ಲಿ ರೂ 25 ಕೋಟಿ ವೆಚ್ಚದಲ್ಲಿ ಅಂಡರ್ಪಾಸ್ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ ಎಂದರು.
ಶಾಸಕ ರಘುಪತಿ ಭಟ್ ಮಾತನಾಡಿ, ಡಬಲ್ ಎಂಜಿನ್ ಸರ್ಕಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಹೆಬ್ರಿಯಿಂದ ಮಲ್ಪೆಯವರೆಗೆ ರೂ 350 ಕೋಟಿ ವೆಚ್ಚದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಪ್ರಸ್ತು ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ಕಾಮಗಾರಿಗೆ ಭೂಮಿ ನೀಡುವ ಮಾಲೀಕರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಆಶ್ವಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮುಖಂಡರಾದ ಮಟ್ಟಾರು ರತ್ನಾಕರ ಹೆಗಡೆ ಇದ್ದರು. ನಗರಸಭಾ ಸದಸ್ಯ ಸುಂದರ ಕಲ್ಮಾಡಿ ವಂದಿಸಿದರು.