ಕರ್ನಾಟಕಕ್ಕೆ ಮುಂದಿನ 4 ದಿನ ಭಾರಿ ಮಳೆ ಎಚ್ಚರಿಕೆ: ಸೆಪ್ಟೆಂಬರ್ 24 ರಂದು ಕರಾವಳಿಗೆ ರೆಡ್ ಅಲರ್ಟ್
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಕ್ರಮವಾಗಿ ರೆಡ್, ಆರೆಂಜ್ ಹಾಗೂ ಯಲ್ಲೋ ಅಲರ್ಟ್ಗಳನ್ನು ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯಲ್ಲೋ ಅಲರ್ಟ್’ ನೀಡಲಾಗಿದೆ.
ಸೆಪ್ಟೆಂಬರ್ 22 (ಮಂಗಳವಾರ – 5 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್): ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಸೆಪ್ಟೆಂಬರ್ 23 (ಬುಧವಾರ – ಆರೆಂಜ್ & ಯಲ್ಲೋ ಅಲರ್ಟ್):
ಕಲಬುರಗಿ, ವಿಜಯಪುರ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿಯಿಂದ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಇದೇ ದಿನ ಬೀದರ್, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯನಗರ, ಉತ್ತರ ಕನ್ನಡ, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಇರಲಿದೆ.
ಸೆಪ್ಟೆಂಬರ್ 24 (ಗುರುವಾರ – ಕರಾವಳಿಗೆ ರೆಡ್ ಅಲರ್ಟ್):
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತ್ಯಂತ ಭೀಕರ ಮಳೆಯಾಗುವ ಸಾಧ್ಯತೆಯಿದ್ದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. Kodagu (ಕೊಡಗು), ಹಾಸನ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಿದ್ದರೆ; ಧಾರವಾಡ, ಗದಗ, ಕೊಪ್ಪಳ, ರಾಯಚೂರು, ತುಮಕೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ವಿಧಿಸಲಾಗಿದೆ.
ಧಾರಾಕಾರ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹಾಗೂ ಕರಾವಳಿ ಭಾಗದ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.













