ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಬಂಧನ
ವಿಟ್ಲ: ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 24/2020 ಹಾಗೂ 34/2022ರ ಕಳ್ಳತನ ಪ್ರಕರಣಗಳಲ್ಲಿ (ಕಲಂ 457, 380 ಐಪಿಸಿ) ಆರೋಪಿಯಾಗಿರುವ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ @ ಕೆ.ಎಂ. ಸಲಾಂ @ ಡಾಲರ್ ಸಲಾಂ ಎಂಬಾತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವಿಟ್ಲ ಠಾಣೆ ಪೊಲೀಸರು ಜೂನ್ 16, 2026ರಂದು ಪುತ್ತೂರು ರೈಲ್ವೆ ನಿಲ್ದಾಣದ ಸಮೀಪ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದಲ್ಲದೆ, ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2023ರಡಿ ಐಪಿಸಿ ಕಲಂ 353, 332 ಹಾಗೂ 504 ಪ್ರಕರಣವೂ ದಾಖಲಾಗಿದ್ದು, ಆ ಪ್ರಕರಣದಲ್ಲಿಯೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಾರಣ ಬಂಧನ ವಾರಂಟ್ ಜಾರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.













