Home Mangalorean News Kannada News ಖನಿಜ ಪ್ರತಿಷ್ಠಾನ ನಿಧಿ ಬಳಕೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಖನಿಜ ಪ್ರತಿಷ್ಠಾನ ನಿಧಿ ಬಳಕೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Spread the love

ಖನಿಜ ಪ್ರತಿಷ್ಠಾನ ನಿಧಿ ಬಳಕೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು: ಗಣಿಗಾರಿಕೆಯಿಂದ ಹಾನಿಯಾದ ಪ್ರದೇಶಗಳ ಸುಧಾರಣೆ ಮತ್ತು ಸಂತ್ರಸ್ತರ ಉಪಯೋಗಕ್ಕಾಗಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಬಳಕೆಯ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಬಳಕೆಯ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರಷರ್, ಕಲ್ಲು ಗಣಿಗಾರಿಕೆ, ಮರಳುಗಾರಿಕೆ ಸೇರಿದಂತೆ ವಿವಿಧ ಗಣಿಗಾರಿಕೆಗಳಿಂದ ತೊಂದರೆಗೀಡಾದ ಪ್ರದೇಶಗಳಲ್ಲಿ ರಸ್ತೆ, ಶಾಲೆ ಮತ್ತು ಅಂಗನವಾಡಿ ಕಟ್ಟಡ ಸೇರಿದಂತೆ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ ಅವಕಾಶವಿದೆ. 2015 ರಿಂದ ಇದುವರೆಗೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 47.62 ಕೋಟಿ ರೂ. ಮೊತ್ತ ಸಂಗ್ರಹವಾಗಿದೆ. ಗಣಿಗಾರಿಕೆ ರಾಯಲ್ಟಿಯ ಶೇ. 10 ರಷ್ಟನ್ನು ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಈ ನಿಟ್ಟಿನಲ್ಲಿ ಅಗತ್ಯವಿರುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜಿಲ್ಲೆಯ ಶಾಸಕರೊಂದಿಗೆ ಅತಿ ಶೀಘ್ರವೇ ಸಭೆ ನಡೆಸಿ ಈ ಮೊತ್ತವನ್ನು ಸದ್ಬಳಕೆ ಮಾಡಲು ಚರ್ಚಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ಗಣಿಗಾರಿಕೆ ಪ್ರದೇಶದ 5 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಹಾನಿಯಾದ ಪ್ರದೇಶಗಳನ್ನು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಈ ನಿಧಿಯಲ್ಲಿ ಅವಕಾಶವಿದೆ. ಈಗಾಗಲೇ 342 ಲಕ್ಷ ವೆಚ್ಚದಲ್ಲಿ 57 ವಿವಿಧ ಕಾಮಗಾರಿಗಳು ಈ ನಿಧಿಯಲ್ಲಿ ಪೂರ್ಣಗೊಂಡಿರುತ್ತದೆ. ಕೋವಿಡ್ ಸಂದರ್ಭದಲ್ಲಿ ವಿವಿಧ ಆರೋಗ್ಯ ಸೌಲಭ್ಯಗಳಿಗಾಗಿ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 1.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಪೋಲಿಸ್ ಅಧೀಕ್ಷಕ ಡಾ. ಅರುಣ್ ಕೆ, ಗಣಿ ಇಲಾಖೆ ಉಪನಿರ್ದೇಶಕ ಸಂದೀಪ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version