ಗಂಗೊಳ್ಳಿಯಲ್ಲಿ ಅಂಗಡಿ, ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಬ್ಬರಿಗೆ ಏಳು ವರ್ಷ ಜೈಲು ಶಿಕ್ಷೆ

ಗಂಗೊಳ್ಳಿಯಲ್ಲಿ ಅಂಗಡಿ, ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಬ್ಬರಿಗೆ ಏಳು ವರ್ಷ ಜೈಲು ಶಿಕ್ಷೆ

ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿಯಲ್ಲಿ ನಡೆದ ಅಂಗಡಿ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳಿಬ್ಬರಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಗಂಗೊಳ್ಳಿಯ ಮಹಮ್ಮದ್ ಜುನೈದ್ ಹಾಗೂ ವೆಲ್ಡಿಂಗ್ ಜಾಫರ್ ಶಿಕ್ಷೆಗೆ ಗುರಿಯಾದ ಆರೋಪಿಗಳು.

ಅವರು 2015 ಜ.21ರಂದು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮುಖ್ಯರಸ್ತೆಯಲ್ಲಿರುವ ವೆಂಕಟೇಶ ಶೆಣೈ ಎಂಬವರ ವೆಂಕಟೇಶ್ವರ ಸ್ಟೋರ್ಸ್‌, ಅಂಗಡಿಯ ಗೋದಾಮು ಹಾಗೂ ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು.

ಈ ಬಗ್ಗೆ ತನಿಖೆ ನಡೆಸಿದ ಆಗಿನ ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿತು. ಆರೋಪಿಗಳ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ ಖಂಡೇರಿ ಆರೋಪಿಗಳಿಬ್ಬರ ಮೇಲಿನ ಆರೋಪ ಸಾಬೀತಾಗಿರುವುದಾಗಿ ಡಿ. 5ರಂದು ತೀರ್ಪು ನೀಡಿ, ಡಿ.10ಕ್ಕೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದ್ದರು.

ಅದರಂತೆ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶರು, ಐಪಿಸಿ ಕಲಂ 451(ಕಟ್ಟಡಕ್ಕೆ ಅಕ್ರಮ ಪ್ರವೇಶ)ರಡಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ಕಲಂ 436 (ಕಟ್ಟಡಕ್ಕೆ ಬೆಂಕಿ ಹಾಕಿದ ಪ್ರಕರಣ)ರಡಿ 7ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ಮತ್ತು 427 (ನಷ್ಟಗೊಳಿಸಿದ ಪ್ರಕರಣ) ಕಲಂ ಅಡಿ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು. ಪ್ರಾಸಿ ಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.