ಗಡಿ ವಿವಾದ: ನಾಳೆ ಸುಪ್ರಿಂನಲ್ಲಿ ಅರ್ಜಿ ವಿಚಾರಣೆ

Spread the love

ಗಡಿ ವಿವಾದ: ನಾಳೆ ಸುಪ್ರಿಂನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‍ನಲ್ಲಿ ಸಲ್ಲಿಸಿದ ಅರ್ಜಿಯ ವಿಚಾರಣೆ ಬುಧವಾರ (ನ.23) ನಡೆಯಲಿದ್ದು, ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿಕೊಂಡಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುತ್ತದೆ. ಹಾಗೂ ಗಡಿ ವಿವಾದದ ಹೋರಾಟದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕ ಸರಕಾರದ ಬೆಂಬಲಕ್ಕೆ ನಿಂತುಕೊಳ್ಳಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

1956ರ ರಾಜ್ಯ ಪುನರ್ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ಸತತ 18 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪರ ಸಮರ್ಥವಾದ ವಾದ ಮಂಡಿಸಲು ಬೇಕಾದ ಪೂರ್ವ ಸಿದ್ಧತೆಗಳನ್ನೂ ಅಲ್ಲಿನ ಸರ್ಕಾರ ಮಾಡಿಕೊಂಡಿದೆ ಎನ್ನಲಾಗಿದೆ. ಅದಕ್ಕಾಗಿ ಮಹಾರಾಷ್ಟ್ರ ಸರಕಾರದ ಸಚಿವರಾದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ ಹಾಗೂ ಅಬಕಾರಿ ಸಚಿವ ಶಂಭುರಾಜೇ ದೇಸಾಯಿ ಉಭಯರನ್ನು ಗಡಿ ಉಸ್ತುವಾರಿ ಸಚಿವರೆಂದು ನಿಯೋಜಿಸಿ ಬೆಳಗಾವಿ, ಬೀದರ, ಭಾಲ್ಕಿ, ಕಾರವಾರ ಸೇರಿದಂತೆ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಬೇಕು ಎನ್ನುವುದು ʻಮಹಾʼ ವಾದವನ್ನು ಮಹಾರಾಷ್ಟ್ರ ಸರಕಾರ ಸುಪ್ರಿಂ ಕೋರ್ಟ್‍ನಲ್ಲಿ ಮಂಡಿಸಿದೆ.

ಇದಕ್ಕೆ ಪ್ರತಿಯಾಗಿ ಕರ್ನಾಟಕ ಸರಕಾರ ಕಾಲ ಕಾಲಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರತಿವಾದವನ್ನು ಮಂಡಿಸುತ್ತಲೇ ಬಂದಿದೆ. ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿರುವುದು ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಸರಕಾರ ರಚನೆ ಮಾಡಿರುವ ವಕೀಲರ ತಂಡದಲ್ಲಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ ಮತ್ತು ಬೆಳಗಾವಿಯ ವಕೀಲರಾದ ಮಾರುತಿ ಜಿರ್ಲೆ ಹಾಗೂ ರಘುಪತಿ ಅವರನ್ನು ನೇಮಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುತ್ತದೆ.

ಈಗಾಗಲೆ ರಾಜ್ಯದ ಪರವಾಗಿ ವಾದ ಮಂಡಿಸಲಿರುವ ವಕೀಲರ ತಂಡವು 2-3 ಬಾರಿ ಸಭೆ ಸೇರಿ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಯಾವ ರೀತಿಯಲ್ಲಿ ವಾದ ಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷದ ನಾಯಕರ ಸಲಹೆಗಳನ್ನು ಪಡೆದು ರಾಜ್ಯದ ಪರವಾಗಿ ಸುಪ್ರಿಂ ಕೋರ್ಟ್‍ನಲ್ಲಿ ಸಮರ್ಥವಾದ ವಾದ ಮಂಡಿಸುವ ಮೂಲಕ ಕನ್ನಡಿಗರ ಸ್ವಾಭಿಮಾನದ ಗಡಿಯ ರಕ್ಷಣೆಯನ್ನು ಮಾಡಿಕೊಳ್ಳುವಲ್ಲಿ ಸಮರ್ಥರಾಗಲಿದ್ದಾರೆ ಎನ್ನುವ ಭರವಸೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ ಎಂದು ಪರಿಷತ್ತಿನ ಅಧ್ಯಕ್ಷರು ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here