ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರೋಶನ್ ಶೆಟ್ಟಿ ಬಂಧನಕ್ಕೆ ಬಿಜೆಪಿ ಯುವ ಮೋರ್ಚಾ ಆಗ್ರಹ
ಉಡುಪಿ: ಭಾರತದ ಸಾರ್ವಭೌಮತೆ, ಏಕತೆ ಹಾಗೂ ಸಮಾಜದ ಶಾಂತಿಗೆ ಧಕ್ಕೆ ತರುವಂತ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಆರೋಪದ ಮೇಲೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥ ರೋಶನ್ ಶೆಟ್ಟಿ ವಿರುದ್ಧ ಬಿಜೆಪಿ ಯುವಮೋರ್ಚಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ತಿಂಗಳ ಹಿಂದೆ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಪ್ರಸ್ತುತ ನೇಪಾಳದಲ್ಲಿ ನಡೆದಿರುವ ನಾಗರಿಕ ದಂಗೆಗಳನ್ನು ಉದಾಹರಣೆ ನೀಡುತ್ತಾ, ಇದೇ ರೀತಿಯ ಘಟನೆ ಭಾರತದಲ್ಲೂ ಸಂಭವಿಸಲಿದೆ ಎಂಬ ಸುಳ್ಳು, ದ್ವೇಷಪೂರ್ಣ ಪೋಸ್ಟ್ನ್ನು ಫೇಸ್ಬುಕ್ನಲ್ಲಿ ಹಾಕಲಾಗಿದೆ. ಈ ಪೋಸ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಣಕುಚಿತ್ರ ಹಾಗೂ ಬಿಜೆಪಿ ಧ್ವಜವನ್ನು ಬಳಸಿ ದೇಶದ್ರೋಹಿ ಸಂದೇಶ ಹರಡುವ ಯತ್ನ ನಡೆದಿದೆ ಎಂದು ಯುವಮೋರ್ಚಾ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣವನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳು 152, 192 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(F) ಅಡಿ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸಿದರು.