ಜಿಲ್ಲೆಯಲ್ಲಿ 83562 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ- ಜಿಲ್ಲಾಧಿಕಾರಿ ವೆಂಕಟೇಶ್

Spread the love

ಜಿಲ್ಲೆಯಲ್ಲಿ 83562 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ- ಜಿಲ್ಲಾಧಿಕಾರಿ ವೆಂಕಟೇಶ್

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 2 ರಂದು ನಡೆಯುವ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ 83562 ಮಕ್ಕಳಿಗೆ ಪೊಲಿಯೋ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಲ್ಸ್ ಪೊಲಿಯೋ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶದಲ್ಲಿ ಪೊಲಿಯೋ ನಿರ್ಮೂಲನೆಯಾಗಿದ್ದರೂ ನೆರೆಯ ದೇಶಗಳಿಂದ ಪೊಲಿಯೋ ಹರಡುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ದೇಶದಾದ್ಯಂತ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲೆಯಲ್ಲಿ 83562 ಮಕ್ಕಳಿಗೆ ಪೊಲಿಯೋ ಲಸಿಕೆ ನೀಡಲು ಗುರಿ ಇದ್ದು, ಇದಕ್ಕಾಗಿ 648 ಬೂತ್ ಗಳನ್ನು ತೆರೆಯಲಾಗುವುದು ಅಲ್ಲದೇ 17 ಮೊಬೈಲ್ ಬೂತ್ ಗಳು ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪೊಲಿಯೋ ಕಾರ್ಯಕ್ರಮಕ್ಕೆ ಅಗತ್ಯವಿರುವ ವಾಹನಗಳನ್ನು ಒದಗಿಸುವಂತೆ ಆರ್.ಟಿ.ಓ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ನಗರ ಪ್ರದೇಶದಲ್ಲಿರುವ ವಲಸೆ ಕಾರ್ಮಿಕರ ಮಕ್ಕಳಿಗೆ , ಕಟ್ಟಡ ನಿರ್ಮಾಣ ಹಾಗೂ ರಸ್ತೆ ಕಾಮಗಾರಿಗಳು ನಡೆಯುತ್ತಿರುವ ಪ್ರದೇಶದಲ್ಲಿ ವಾಸ ವಿರುವ ಕೂಲಿ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವಂತೆ ಆರೋಗ್ಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳಿಗೆ ಮತ್ತು ಕಾರ್ಯಕ್ರಮಕ್ಕೆ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕನ್ನು ನಿಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪಲ್ಸ್ ಪೊಲಿಯೋ ನಡೆಯುವ ಸಂದರ್ಭದಲ್ಲಿ ಲಸಿಕೆಗಳ ಶೇಖರಣೆಗೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮಕ್ಕೆ ರೋಟರಿ , ಲಯನ್ಸ್ ಸಂಸ್ಥೆಗಳ ಸಹಕಾರ ಪಡೆಯುವಂತೆ ಹಾಗೂ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಶಾಲೆಗಳಲ್ಲಿ ಮಕ್ಕಳ ಮೂಲಕ ಪೋಷಕರಿಗೆ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಿಂದ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಡಿಹೆಚ್‍ಓ ಡಾ. ರೋಹಿಣಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಎಂ.ಜಿ.ರಾಮ ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love