ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನದ ಪ್ರಶ್ನೆ ಕಾಡುತ್ತಿದೆಯೆ: ಡಿ.ಕೆ. ಶಿವಕುಮಾರ್

Spread the love

ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನದ ಪ್ರಶ್ನೆ ಕಾಡುತ್ತಿದೆಯೆ: ಡಿ.ಕೆ. ಶಿವಕುಮಾರ್
 

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೊದಲು ಕಾಂಗ್ರೆಸ್ ನಾಯಕರ ಜತೆ ಮಾತುಕತೆಯನ್ನೇ ನಡೆಸದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನದ ಪ್ರಶ್ನೆ ಕಾಡುತ್ತಿದೆಯೆ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಈ ರೀತಿ ಪ್ರತಿಕ್ರಿಯಿಸಿದರು.

ಸಾಕಷ್ಟು ಭಿನ್ನಾಭಿಪ್ರಾಯಗಳ ನಡುವೆಯೂ ಹಿಂದೆ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಿತ್ತು. ಈಗ ಪಕ್ಷದ ನಾಯಕರ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಜಾತ್ಯತೀತ ಸಿದ್ಧಾಂತ ಉಳಿಸಿಕೊಳ್ಳಲು ಜೆಡಿಎಸ್ ಈ ಬಾರಿ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮನವಿ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ. ಅದೇ ರೀತಿ ಜೆಡಿಎಸ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲಿ ಎಂದು ಮನವಿ ಮಾಡುತ್ತೇನೆ ಎಂದರು.

ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗುವ ಮುನ್ನ ವಿದೇಶ ಪ್ರವಾಸ ಕೈಗೊಂಡಿದ್ದು ಸೇರಿದಂತೆ ಹಲವು ವಿಚಾರಗಳ ಕುರಿತು ಕುಮಾರಸ್ವಾಮಿ ಮಾತನಾಡಿದ್ದಾರೆ. ಜೆಡಿಎಸ್ ರಾಜ್ಯ ಘಟಕದ‌ ಅಧ್ಯಕ್ಷರಾಗಿರುವ ಸಿ.ಎಂ. ಇಬ್ರಾಹಿಂ ಕೂಡ ಏನೇನು ಮಾತನಾಡಿದ್ದರು ಎಂಬುದಕ್ಕೆ ದಾಖಲೆಗಳಿವೆ. ಸರ್ಕಾರ ರಚಿಸುವ ಸಂದರ್ಭದಲ್ಲಿ ಏನೆಲ್ಲಾ ಮಾತುಕತೆ, ತೀರ್ಮಾನ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಆ ಕುರಿತು ಈಗ ಯಾವುದೇ ವ್ಯಾಖ್ಯಾನ ಮಾಡಲು ಬಯಸುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿ ಜೆಡಿಎಸ್ ನಾಯಕರಾಗಿ ಏನು ಬೇಕಾದರೂ ಮಾತನಾಡಬಹುದು. ನಾನು ಹಾಗೆ ಮಾತನಾಡಲು ಸಾಧ್ಯವಿಲ್ಲ. ನಾನು ಏನೇ ಮಾತನಾಡಬೇಕಾದರೂ ಪಕ್ಷದ ವರಿಷ್ಠರ ಜತೆ ಚರ್ಚಿಸಿದ ಬಳಿಕವೇ ಮಾತನಾಡಬೇಕು ಎಂದರು.


Spread the love