ದಕ ಜಿಲ್ಲೆಯಲ್ಲಿ ಭಾರೀ ಮಳೆ, ಮುಂಜಾಗ್ರತಾ ಕ್ರಮಕೈಗೊಳ್ಳಲು ಸರ್ಕಾರ ವಿಫಲ — ಶೌವಾದ್ ಗೂನಡ್ಕ

Spread the love

ದಕ ಜಿಲ್ಲೆಯಲ್ಲಿ ಭಾರೀ ಮಳೆ, ಮುಂಜಾಗ್ರತಾ ಕ್ರಮಕೈಗೊಳ್ಳಲು ಸರ್ಕಾರ ವಿಫಲ — ಶೌವಾದ್ ಗೂನಡ್ಕ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಭಾರೀ ಮಳೆಯು ಸುರಿಯುತ್ತಿದ್ದು, ಹಲವು ಕಡೆ ಸಮರ್ಪಕ ಚರಂಡಿ ವ್ಯವಸ್ಥೆಗಳಿಲ್ಲದೆ ಮಳೆ ನೀರು ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಪ್ರಾಕೃತಿಕ ವಿಕೋಪಗಳಾಗುವ ಮುನ್ಸೂಚನೆಗಳಿದ್ದರೂ ಕೂಡ ಮುಂಜಾಗ್ರತ ಕ್ರಮಕೈಗೊಳ್ಳಲು ಸರ್ಕಾರವು ವಿಫಲವಾಗಿದೆ ಎಂದು ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರವನ್ನು ಸ್ಮಾರ್ಟ್ ಸಿಟಿ ಮಾಡುವುದಾಗಿ ಹೇಳಿ ಇದೀಗ ವಾಟರ್ ಸಿಟಿಯನ್ನಾಗಿ ಮಾಡಲಾಗಿದೆ. ಅವೈಜ್ಞಾನಿಕ ಕಾಮಗಾರಿಗಳಿಂದ ಮಳೆಗಾಲದಲ್ಲಿ ಸಾರ್ವಜನಿಕರು ತೊಂದರೆಯನ್ನು ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರನ್ನು ಮಾದರಿ ನಗರವನ್ನಾಗಿ ಮಾಡುತ್ತೇವೆ ಎಂದು ಹೇಳುವ ಶಾಸಕರಾದ ವೇದವ್ಯಾಸ ಕಾಮತ್ ರವರು ಪ್ರಚಾರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸಂಪಾಜೆ ಅರಂತೋಡು ಭಾಗಗಳಲ್ಲಿ ಸತತವಾಗಿ ಭೂಕಂಪನವಾಗುತ್ತಿದ್ದರೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಇನ್ನೂ ಸ್ಥಳಕ್ಕೆ ಭೇಟಿ ನೀಡಿಲ್ಲ, ಇದು ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರಶ್ನಿಸುವಂತಿದೆ ಎಂದು ಶೌವಾದ್ ಗೂನಡ್ಕರವರು ಟೀಕಿಸಿದ್ದಾರೆ. ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳಿಗೆ, ಕೃಷಿ ಭೂಮಿಗಳಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ಸರ್ಕಾರ ನೀಡಬೇಕು ಹಾಗೂ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಆಗುತ್ತಿರುವ ಭೂಕುಸಿತದಿಂದಾಗಿ ಜನರು ಆತಂಕಗೀಡಾಗಿದ್ದು, ಸರ್ಕಾರವು ತಕ್ಷಣವೇ ತುರ್ತು ಪರಿಹಾರದ ಕ್ರಮವನ್ನು ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.


Spread the love