ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ

Spread the love

ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ

ರಾಮನಗರ: ಬೆಂಗಳೂರು-ಮೈಸೂರು ದಶಪಥದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಗಳ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಮನ ಸೆಳೆಯುವುದಾಗಿ ಮಾಗಡಿ ಕ್ಷೇತ್ರ ಶಾಸಕ ಎ.ಮಂಜುನಾಥ್ ತಿಳಿಸಿದ್ದಾರೆ.

ತಾಲ್ಲೂಕಿನ ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಪಂ ವ್ಯಾಪ್ತಿಯ ಜಡೇನಹಳ್ಳಿ ಗ್ರಾಮದಲ್ಲಿ 1.70 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿನ ಕೆಲವು ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಹಿಂದೆಯೇ ಪತ್ರ ಬರೆದಿದ್ದೆ. ಅಲ್ಲದೆ ವಿಧಾನಸಭಾ ಅಧಿವೇಶನದಲ್ಲಿಯೂ ಈ ಕುರಿತು ಚರ್ಚೆ ಮಾಡಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರು ಸಹ ಸಂಸತ್ತಿನಲ್ಲಿಯೂ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಗುರುವಾರ ಬೈಪಾಸ್ ಹೆದ್ದಾರಿ ಕಾಮಗಾರಿ ವೀಕ್ಷಣೆಗೆ ಆಗಮಿಸುತ್ತಿರುವ ಕೇಂದ್ರ ಸಾರಿಗೆ ಸಚಿವರ ಬಳಿ ಖುದ್ದಾಗಿ ತಾವು ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದರು.

ಕೇಂದ್ರ ಸಾರಿಗೆ ಸಚಿವರ ಭೇಟಿ ಹಿನ್ನೆಲೆಯಲ್ಲಿ ನನಗೂ ಆಹ್ವಾನ ಬಂದಿದೆ. ಆ ಸಮಯದಲ್ಲಿ ಹೆದ್ದಾರಿ ನಿರ್ಮಾಣದಲ್ಲಿ ಕೃಷಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರ ವಿತರಣೆಯಲ್ಲಿ ತಾರತಮ್ಯ, ಬೈಪಾಸ್ ಹಾಗೂ ಸರ್ವಿಸ್ ರಸ್ತೆಗಳಲ್ಲಿನ ಅವೈಜ್ಞಾನಿಕ ಕಾಮಗಾರಿಗಳಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಲಾಗುವುದು. ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ಸಾಗಿಸಲು ಅಂಬ್ಯುಲೆನ್ಸ್ ಹಾಗೂ ಇತರೆ ವಾಹನಗಳ ಸಂಚಾರಕ್ಕೆ ಬೈಪಾಸ್ ಮಾರ್ಗಮಧ್ಯೆ ಸಿಗುವ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಆಗಮನ, ನಿರ್ಗಮನಕ್ಕೆ ಅವಕಾಶ ಕಲ್ಪಿಸಬೇಕು. ಹೆದ್ದಾರಿಗೆ ಹೊಂದಿಕೊಂಡಂತೆ ಆಸ್ಪತ್ರೆ, ರೆಸ್ಟೋರೆಂಟ್, ಪೆಟ್ರೋಲ್ ಬಂಕ್, ಶೌಚಾಲಯ ವ್ಯವಸ್ಥೆ ನೀಡುವ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.


Spread the love

Leave a Reply

Please enter your comment!
Please enter your name here