ದೆಹಲಿಯಲ್ಲಿ ಕಾರು ಅಪಘಾತ: ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ ಆರು ಜನರಿಗೆ ಗಾಯ
ಬೆಳಗಾವಿ/ನವದೆಹಲಿ: ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ದೆಹಲಿಯಲ್ಲಿ ಭಾನುವಾರ ರಾತ್ರಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಅಭಯ್ ಪಾಟೀಲ್ ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡಿದ್ದು, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ದೆಹಲಿಯ ಕೇಂದ್ರ ಭಾಗದಲ್ಲಿರುವ ಐ.ಪಿ. ಎಸ್ಟೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಡಬ್ಲ್ಯೂಡಿ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಶಾಸಕ ಅಭಯ್ ಪಾಟೀಲ್ ಹಾಗೂ ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಝಾ ಒಟ್ಟಿಗೆ ಪ್ರಯಾಣಿಸುತ್ತಿದ್ದರು.
ಐ.ಪಿ. ಎಸ್ಟೇಟ್ ಠಾಣೆ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, 32 ವರ್ಷದ ಅಶುತೋಷ್ ಪಾಂಡೆ ಎಂಬುವವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸ್ವಿಫ್ಟ್ ಕಾರಿನಲ್ಲಿ ಲಕ್ಷ್ಮೀ ನಗರದಿಂದ ಐಟಿಒ ಕಡೆಗೆ ಹೊರಟಿದ್ದರು. ಈ ವೇಳೆ ಪಿಡಬ್ಲ್ಯೂಡಿ ಕಚೇರಿ ಸಮೀಪ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ರೇಲಿಂಗ್ ದಾಟಿ ಎದುರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಸ್ವಿಫ್ಟ್ ಕಾರಿನ ಚಾಲಕ ಅಶುತೋಷ್ ಪಾಂಡೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಇನ್ನೋವಾ ಕಾರಿನಲ್ಲಿದ್ದ ಶಾಸಕ ಅಭಯ್ ಪಾಟೀಲ್ ಮತ್ತು ಶಾಸಕ ಅನಿಲ್ ಝಾ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಗಾಯಾಳುಗಳನ್ನು ತಕ್ಷಣವೇ ಲೋಕನಾಯಕ ಜೈ ಪ್ರಕಾಶ್ (LNJP) ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಗಾಯಗೊಂಡ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಅಲ್ಲದೇ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ದೆಹಲಿ ಮೂಲಗಳಿಂದ ಲಭ್ಯವಾಗಿದೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ. ಶಾಸಕ ಅಭಯ್ ಪಾಟೀಲ್ ಅವರು ಅಧಿಕೃತ ಕಾರ್ಯದ ನಿಮಿತ್ತ ದೆಹಲಿಗೆ ತೆರಳಿದ್ದರು. ಇದೇ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಭಯ್ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಸ್ಪಷ್ಟವಾಗಿದೆ. ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಅಭಯ್ ಪಾಟೀಲ ಕುಟುಂಬಸ್ಥರು ತಿಳಿಸಿದ್ದಾರೆ.
