ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು
ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಠಾಣೆಯ ಪೊಲೀಸರು ಗುರುವಾರ ಬೆಳಗ್ಗೆ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬ್ರಹ್ಮಾವರ ಠಾಣಾ ಪೊಲೀಸರು ಉಜಿರೆ ತಿಮರೋಡಿಯಲ್ಲಿರುವ ಮಹೇಶ್ ಶೆಟ್ಟಿಯ ಮನೆಗೆ ಆಗಮಿಸಿದ್ದು, ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು.
ವಿಷಯ ತಿಳಿದ ಅವರ ಬೆಂಬಲಿಗ ಯುವಕರ ತಂಡ ಮನೆಯ ಎದುರು ಜಮಾಯಿಸಿತ್ತು. ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಬಳಿಕ ತಿಮರೋಡಿ ಪರ ವಕೀಲರು ಪೊಲೀಸರ ಜೊತೆ ಮಾತನಾಡಿ, ತಿಮರೋಡಿ ಸ್ವತಃ ಠಾಣೆಗೆ ಹಾಜರಾಗುವುದಾಗಿ ಹೇಳಿದರು. ಅದರಂತೆ ತಿಮರೋಡಿ ಖಾಸಗಿ ಕಾರಿನಲ್ಲಿ ಉಡುಪಿ ಪೊಲೀಸರ ಜೊತೆ ತೆರಳಿದ್ದಾರೆ. ಸೌಜನ್ಯಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಕೂಡಾ ಕಾರಿನಲ್ಲಿ ತೆರಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ತಿಮರೋಡಿ ವಿಉರದ್ದ ನಾನ್ ಬೆಲೆಬಲ್ ಕೇಸುಗಳಿದ್ದು ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಪೊಲೀಸರು ಎರಡು ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ಕಾರಣ ಉಡುಪಿ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.