ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

Spread the love

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ಕುಂದಾಪುರ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ.

ಕುಂದಾಪುರದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಸಂಜೆ ಸುಮಾರು 7 ರ ವೇಳೆಗೆ ಅರಾಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಬಸ್ಸು ಹೆದ್ದಾರಿಯ ರಸ್ತೆ ವಿಭಾಜಕವೇರಿ ವಿರುದ್ಧ ದಿಕ್ಕಿಗೆ ಪಲ್ಟಿಯಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಎಸ್.ಐ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು.


Spread the love