ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

Spread the love

ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ”ಯ ಅಂಗವಾಗಿಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವತಿಯಿಂದ ನಡೆದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ” ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಅತ್ಯುನ್ನತ ಸೇವೆಗೈದ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಹೇಳಿದರು.

 ಸರ್ಕಾರಿ ನೌಕರರು ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.
ಸರ್ಕಾರಿ ನೌಕರರು, ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸರ್ಕಾರಿ ನೌಕರರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವ 19 ಆದೇಶಗಳನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ನಾಗರೀಕ ಸೇವಾ ದಿನಾಚರಣೆ ಹೊರತುಪಡಿಸಿದರೆ  ಬೇರಾವುದೇ ರಾಜ್ಯ ಸರ್ಕಾರ ತನ್ನ ನೌಕರರ ದಿನಾಚರಣೆ ಆಚರಿಸುತ್ತಿಲ್ಲ. ಪ್ರಪ್ರಥಮ ಬಾರಿಗೆ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ”ಯನ್ನು ನಮ್ಮ ಕರ್ನಾಟಕದಲ್ಲಿ ಆಚರಿಸುತ್ತಿರುವುದು ನನಗೆ ತುಂಬಾ ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್ ಚಂದ್ರಶೇಖರ್,  ಸುಧಾರಣಾ ಇಲಾಖೆಯ ಕಾರ್ಯದರ್ಶಿ ಪಿ ಹೇಮಲತಾ, ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರೂ ಸೇರಿದಂತೆ ಹಲವರು ಇದ್ದರು.


Spread the love

Leave a Reply

Please enter your comment!
Please enter your name here