ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಮುಂದೆ ಸರ್ಕಾರ ರಚನೆಗೆ ಸಹಕಾರಿ – ಮಂಜುನಾಥ ಭಂಡಾರಿ

Spread the love

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಮುಂದೆ ಸರ್ಕಾರ ರಚನೆಗೆ ಸಹಕಾರಿ – ಮಂಜುನಾಥ ಭಂಡಾರಿ

ಉಡುಪಿ: ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿತ್ತಿದ ಬೀಜ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಫಲ ನೀಡಲಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ, ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು ವಿಧಾನಪರಿಷತ್‌ ದಕ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.

ಅವರು ಗುರುವಾರ ಉಡುಪಿ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಪಕ್ಷದ ನಾಯಕರ ಸಭೆಯಲ್ಲಿ ಮಾತನಾಡಿ ಎಲ್ಲಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ತಮ್ಮ ತಮ್ಮ ವ್ಯಾಪ್ತಿಯ ಎಲ್ಲಾ ಮತದಾರರನ್ನು ನೇರವಾಗಿ ಸಂಪರ್ಕಿಸಿ ಕಾಂಗ್ರೆಸ್‌ ಗೆ ಮತದಾನ ಮಾಡುವಂತೆ ಮನವೊಲಿಸಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್‌ ಮಾತನಾಡಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಕೊಂಡವರನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡ ಲಾಗಿದೆ. ಕೇವಲ ಕಾಂಗ್ರೆಸ್ ಮಾತ್ರ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಬಿಜೆಪಿ ಚುನಾವಣೆಗೆ ನಿಲ್ಲಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ನೋಡಿದರೆ ನಿಮಗೆ ಇದು ಮನದಟ್ಟಾಗುತ್ತದೆ. ನಾವು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು ಎಲ್ಲರಿಗೂ ಟಿಕೇಟ್ ನೀಡಿದ್ದೇವೆ. ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯನ್ನು ಪಕ್ಷದ ಕಾರ್ಯಕರ್ತ ಮತದಾರರು ಗಂಭೀರ ವಾಗಿ ಪರಿಗಣಿಸಿ, ಪಕ್ಷದ ಅಧಿಕೃತ ಅಭ್ಯರ್ಥಿಯಾದ ಮಂಜುನಾಥ ಭಂಡಾರಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು

ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್‌ ಚಂದ್ರ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್‌ನ ನಾಯಕರಾಗಿರುವ ಶ್ಯಾಮಲಾ ಭಂಡಾರಿ, ಎಂ.ಎ.ಗಫೂರ್, ದಿನೇಶ್ ಪುತ್ರನ್, ವೆರೋನಿಕಾ ಕರ್ನೇಲಿಯೊ, ಸರಳಾ ಕಾಂಚನ್ ಹಾಗೂ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರೆ, ಜಿಲ್ಲಾ ವಕ್ತಾರ ಬಿಪಿನ್‌ ಚಂದ್ರ ಪಾಲ್ ಅತಿಥಿಗಳನ್ನು ಸ್ವಾಗತಿಸಿದರು. ರೋಶನಿ ಒಲಿವೇರಾ ಹಾಗೂ ಡಾ.ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


Spread the love

Leave a Reply