ಪುತ್ತೂರು | ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಪುತ್ತೂರು: ರಸ್ತೆ ಅಂಚಿನಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ತಡರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಎಂಬಲ್ಲಿನ ನಿವಾಸಿ ಸುದೀಪ್(36) ಮೃತಪಟ್ಟವರು.
ಶಾಮಿಯಾನ ಸಾಗಿಸುತ್ತಿದ್ದ ಲಾರಿಯು ರಸ್ತೆಯ ಅಂಚಿನಲ್ಲಿ ಯಾವುದೇ ಮುನ್ನೆಚ್ಚರಿಕಾ ಸಂಕೇತಗಳಿಲ್ಲದೆ ನಿಲ್ಲಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದ್ದು, ಜೊತೆಗೆ ತುಂತುರು ಮಳೆಯಾಗುತ್ತಿದ್ದ ಕಾರಣ ಲಾರಿ ನಿಲ್ಲಿಸಿದ್ದ ಬಗ್ಗೆ ಅರಿವಿಗೆ ಬಾರದೆ ಸುದೀಪ್ ಚಲಾಯಿಸುತ್ತಿದ್ದ ಬೈಕ್ ನೇರವಾಗಿ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಸುದೀಪ್ ರಸ್ತೆಗೆ ಎಸೆಯಲ್ಪಟ್ಡಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸುದೀಪ್ ತನ್ನ ಬೈಕೊನಲ್ಲಿ ಬಂಟ್ವಾಳ ತಾಲೂಕಿನ ನೇರಳಕಟ್ಟೆಯಲ್ಲಿರುವ ತಮ್ಮ ಸಹೋದರಿಯ ಮನೆಯ ಕಡೆಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.