ಪ್ರತ್ಯೇಕ ಎಂಡಿಎಂಎ ಮಾರಾಟ ಯತ್ನ ಪ್ರಕರಣ: ಮೂವರ ಬಂಧನ

Spread the love

ಪ್ರತ್ಯೇಕ ಎಂಡಿಎಂಎ ಮಾರಾಟ ಯತ್ನ ಪ್ರಕರಣ: ಮೂವರ ಬಂಧನ

ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ಸ್ ಶೆಡ್ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಮಾದಕ ವಸ್ತು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕುಲಶೇಖರದ ಸಿಲ್ವರ್ ಗೇಟ್ ನಿವಾಸಿ ಜನನ್ ಜಗನ್ನಾಥ್ (29) ಹಾಗೂ ಬೋಳಾರದ ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ.

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಜೂನ್ 8ರಂದು ಕಾರ್ಯಾಚರಣೆ ನಡೆಸಿದ ಮಂಗಳೂರು ದಕ್ಷಿಣ ಠಾಣೆಯ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು ಮೊಬೈಲ್ ಫೋನ್ಗಳು ಹಾಗೂ ಒಂದು ಡಿಜಿಟಲ್ ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 122/2026ರಡಿ ಎನ್ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 22(ಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಎಂಡಿಎಂಎ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬಂಧನ

ಇದೇ ವೇಳೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈಗಾಗಲೇ ದಾಖಲಾಗಿದ್ದ ಅಪರಾಧ ಸಂಖ್ಯೆ 116/2026ರ ಎಂಡಿಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸುಶಾನ್ ಪೂಜಾರಿ (27), ಕಾರ್ ಸ್ಟ್ರೀಟ್ ಸಮೀಪದ ನಳಂದ ಶಾಲೆ ಬಳಿಯ ನಿವಾಸಿ ಎಂದು ಗುರುತಿಸಲಾಗಿದೆ.

ಈ ಪ್ರಕರಣದಲ್ಲಿ ಈ ಹಿಂದೆ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಸುಶಾನ್ ಪೂಜಾರಿಯನ್ನು ಜೂನ್ 9ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments