
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಲೋಕಾಯುಕ್ತದಿಂದ ಅಹವಾಲು ಸ್ವೀಕಾರ, ಸರಕಾರಿ ಆಸ್ಪತ್ರೆಗೆ ಭೇಟಿ
ಮಂಗಳೂರು: ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ಬುಧವಾರ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿತು.
ಬಂಟ್ವಾಳ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಅಹವಾಲು ಸ್ವೀಕಾರ ಸಭೆ ನಡೆಸಲಾಗಿದೆ. ಸಾರ್ವಜನಿಕರಿಂದ 12 ದೂರುಗಳನ್ನು ಸ್ವೀಕರಿಸಲಾಗಿದೆ. ಈ ದೂರುಗಳು ಕಂದಾಯ, ಭೂದಾಖಲೆ ಇಲಾಖೆ, ಪುರಸಭೆ ಮೊದಲಾದವುಗಳಿಗೆ ಸಂಬಂಧಿಸಿದ್ದಾಗಿದೆ. ಕೆಲವು ದೂರುಗಳನ್ನು ಸ್ಥಳದಲ್ಲೇ ಪರಿಹರಿಸಲಾಗಿದೆ.
ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಚಿಕಿತ್ಸೆಗೆ ಬಂದ ಸಾರ್ವಜನಿಕರು ಹಾಗೂ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುವವರಲ್ಲಿ ಆಸ್ಪತ್ರೆಯ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರ ಹುದ್ದೆ ಮತ್ತು ವೈದ್ಯರ ಹುದ್ದೆ ಖಾಲಿ ಇರುವ ಬಗ್ಗೆಯೂ ಗಮನಹರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.