ಬಿ.ಎಸ್. ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

Spread the love

ಬಿ.ಎಸ್. ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಂಗಳೂರು: ಲೋಕಸಭೆಯ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತುತ ಸಾಲಿನಿಂದ ನೀಡಲು ನಿರ್ಧರಿಸಿದ್ದು, ಮೊದಲ ಸಾಲಿನ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸದನದ ಹಿರಿಯ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಇಂದು ವಿಧಾನಸಭೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಜಾಪ್ರಬುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ವಿಧಾನಮಂಡಲದ ಉಭಯ ಸದನಗಳ ಉದ್ದೇಶಿಸಿ ಮಾತನಾಡಲು ಆಗಮಿಸಿದ್ದ ಲೋಕಸಭಾ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಕುರಿತು ಮಾತನಾಡಿದ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಅವರು ಸಂಸದೀಯ ಕಾರ್ಯಚಟುವಟಿಕೆಯನ್ನು ಪ್ರೋತ್ಸಾಹಿಸಲು ಜೀವಮಾನದಲ್ಲಿ ಒಮ್ಮೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುವುದು ಎಂದು ತಿಳಿಸಿದರು.

ವಿಧಾನ ಸಭೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದ್ದು, ಮಂತ್ರಿಗಳಾದವರು ಈ ಪ್ರಶಸ್ತಿಗೆ ಅನ್ವಯಿಸುವುದಿಲ್ಲ, ಕೇವಲ ಶಾಸಕರನ್ನು ಮಾತ್ರ ಪರಿಗಣಿಸಲಾಗುತ್ತದೆ. ಇಂತಹ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಬಿ.ಎಸ್. ಯಡಿಯೂರಪ್ಪ ಅವರು ಆಯ್ಕೆಯಾಗಿದ್ದು ಪ್ರಶಸ್ತಿಯ ಹಿರಿಮೆ ಹೆಚ್ಚಿಸಿದೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ಇವರು ರೈತನಾಯಕರಾಗಿ, ಜನತೆಯ ಆಗುಹೋಗುಗಳಿಗೆ ಸ್ಪಂದಿಸಿದ, ಸಂಸದೀಯ ವ್ಯವಸ್ಥೆಯಲ್ಲಿ 8 ಬಾರಿ ಗೆದ್ದು ಬಂದಿದ್ದಾರೆ. ರೈತರ ಸಾಲ ಮನ್ನಾ ಇನ್ನಿತರ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿರುತ್ತಾರೆ. ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸದನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನಸೇವೆಯನ್ನು ಜನಾರ್ಧನ ಸೇವೆ ಎಂಬಂತೆ ಮಾಡಿದ್ದಾರೆ ಎಂದರು.

ಸಂಸದೀಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂದು ಸಮಿತಿ ರಚನೆಗೊಂಡಿತು. ಸಮಿತಿಯ ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ, ಸದಸ್ಯರುಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರುಗಳನ್ನೊಳಗೊಂಡ ಸಮಿತಿಯು ಬಿ.ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿಧಾನಸಭೆ ಹಾಗೂ ಪರಿಷತ್ತಿನ ಸದಸ್ಯರುಗಳು ಮತ್ತು ಲೋಕಸಭಾ ಸದಸ್ಯರುಗಳು ಉಪಸ್ಥಿತರಿದ್ದರು.


Spread the love