
ಬೆಂಗಳೂರಿನಲ್ಲಿ ಬೈಂದೂರು ಯುವಕರಿಗೆ ಮಾರಣಾಂತಿಕ ಹಲ್ಲೆ – ಹಲವರ ಖಂಡನೆ
ಕುಂದಾಪುರ: ಬೆಂಗಳೂರಿನ ಕುಂದನಹಳ್ಳಿ ಗೇಟ್ ಹೆಚ್.ಎ.ಎಲ್ ಸಮೀಪ ಬೇಕರಿ ನಡೆಸುತ್ತಿದ್ದ ಬೈಂದೂರು ಕ್ಷೇತ್ರದ ಯುವಕರ ಮೇಲೆ ಸ್ಥಳೀಯ ರೌಡಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಸೇರಿದಂತೆ ಹಲವರು ಖಂಡಿಸಿದ್ದಾರೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸ್ವಯಂ ಪ್ರೇರಿತರಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರವಾಣಿ ಕರೆ ಮಾಡಿದ ಶಾಸಕರು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಘಟನೆಯ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ರಕ್ಷಣೆ ನೀಡಿಸಲು ಸಹಕರಿಸುವಂತೆ ಒತ್ತಾಯಿಸಿದ್ದಾರೆ.
ಯುವ ಬಂಟರ ಸಂಘದ ಖಂಡನೆ :
ಹಲ್ಲೆಯ ಘಟನೆಯನ್ನು ಕುಂದಾಪುರ ತಾಲ್ಲೂಕು ಯುವ ಬಂಟರ ಸಂಘ ತೀವ್ರವಾಗಿ ಖಂಡಿಸಿದೆ.
ಹೊಟ್ಟೆಪಾಡಿಗಾಗಿ ಕಷ್ಟಪಟ್ಟು ಸಾಲ ಮಾಡಿ, ತಮ್ಮ ಜೀವನ ನಿರ್ವಹಣೆಗಾಗಿ ಬೆಂಗಳೂರಿಗೆ ಹೋದ ಯುವಕರ ಮೇಲೆ ಹಲ್ಲೆ ನಡೆಸಿದ ಪುಡಿ ರೌಡಿಗಳಿಗೆ ಉಗ್ರ ಶಿಕ್ಷೆ ನೀಡುವಂತೆ ತಾಲ್ಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.