ಮಂಗಳೂರು: ಎರಡನೇ ಹಂತದ ಕೋವಿಡ್ ನಿರೋಧಕ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ 

Spread the love

ಮಂಗಳೂರು: ಎರಡನೇ ಹಂತದ ಕೋವಿಡ್ ನಿರೋಧಕ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ 

ಮಂಗಳೂರು: ಜಿಲ್ಲೆಯಲ್ಲಿ ಫ್ರೆಂಟ್‍ಲೈನ್ ಕೋವಿಡ್ ವಾರಿಯರ್ಸ್‍ಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ನಗರದ ವೆನ್‍ಲಾಕ್ ಆಸ್ಪತೆಯ ಆಯುಷ್ ವಿಭಾಗದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ ಯವರು ಕೋವಿಡ್ ನಿರೋಧಕ ಲಸಿಕೆ ಸ್ವತಃ ಪಡೆಯುವುದರೊಂದಿಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿ, ಕೋವಿಡ್ ನಿರೋಧಕ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ ಹಾಗೂ ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದ ಅವರು, ಸರ್ಕಾರದ ಫ್ರೆಂಟ್‍ಲೈನ್ ವಾರಿಯರ್ಸ್‍ಗಳಾದ ಪೊಲೀಸ್ ಇಲಾಖೆಯ 4450, ಕಂದಾಯ ಇಲಾಖೆ 1178, ಗ್ರಾಮೀಣಾಭಿವೃದ್ಧಿ ಇಲಾಖೆಯ 1124 ಸೇರಿದಂತೆ ಒಟ್ಟು 6054 ಜನರಿಗೆ ಎರಡನೇ ಹಂತದ ಲಸಿಕೆ ಕಾರ್ಯಕ್ರಮದಲ್ಲಿ ಲಸಿಕೆ ಪಡೆಯಲಿದ್ದಾರೆ ಎಂದರು.

ನಮ್ಮ ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಪ್ರತಿನಿತ್ಯ ಉದ್ಯೋಗಕ್ಕೆ, ಹೆಚ್ಚಿನ ಚಿಕಿತ್ಸೆಗಾಗಿ ಹಾಗೂ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲೆಗೆ ಪ್ರಯಾಣ ಬೆಳೆಸುತ್ತಿದ್ದು, ಅವರಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆ ಅಲ್ಲಿಂದ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿಸಬೇಕೆಂದರು.

ಕೇರಳದಿಂದ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಯ ವರದಿಯನ್ನು ಕಾಲೇಜಿನ ಪ್ರಾಂಶುಪಾಲರು ಪಡೆದುಕೊಳ್ಳಬೇಕು ಹಾಗೂ ವಿದ್ಯಾರ್ಥಿನಿಲಯಗಳಲ್ಲಿಯೂ ಸಹ ಈ ಬಗ್ಗೆ ಎಚ್ಚರ ವಹಿಸಬೇಕು ಎಂದ ಅವರು, ಏಕಕಾಲದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ಮಾಡಿಸುವುದು ಸೂಕ್ತ ಎಂದರು.

ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಮುಖಗವಸುಗಳನ್ನು ಧರಿಸದೇ ಇರುವುದು ಕಂಡುಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸುವುದರೊಂದಿಗೆ ಕೋವಿಡ್ ನಿಯಮಗಳನ್ನು ಚಾಚುತಪ್ಪದೇ ಪಾಲಿಸುವಂತೆ ನೋಡಿಕೊಳ್ಳಬೇಕು ತಿಳಿಸಿದರು.

ಪ್ರೊಬೆಷನರಿ ಐ.ಎ.ಎಸ್ ಮೋನಾ ರ್ಹೋತ್, ಎಸಿಪಿ ವಿನಯ್ ಎ. ಗಾಂವ್ಕರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಲಸಿಕೆಯನ್ನು ಪಡೆದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪ್ಪಾಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love