ಮಂಡ್ಯ ಡಿಸಿ ಕಾರ್ಯವೈಖರಿ ವೀಕ್ಷಿಸಿದ ವಿದ್ಯಾರ್ಥಿನಿ

Spread the love

ಮಂಡ್ಯ ಡಿಸಿ ಕಾರ್ಯವೈಖರಿ ವೀಕ್ಷಿಸಿದ ವಿದ್ಯಾರ್ಥಿನಿ

ಮಂಡ್ಯ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಕೆ.ಆರ್ ಪೇಟೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ.ಟಿ ಅವರಿಗೆ ಸೋಮವಾರ ಒಂದು ದಿನ ಜಿಲ್ಲಾಧಿಕಾರಿಗಳ ಕಾರ್ಯ ವೈಖರಿಯನ್ನು ಸನಿಹದಿಂದ ನೋಡುವ ಅವಕಾಶ ಲಭಿಸಿತು.

ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಂತಹ ಪ್ರಿಯಾ. ಟಿ ರವರನ್ನು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು”ಕೌಶಲ್ಯ ಕೈಪಿಡಿ “ಕೃತಿ ನೀಡಿ ಸ್ವಾಗತಿಸಿದರು. ಪ್ರಿಯಾ ಅವರು ಜಿಲ್ಲಾಧಿಕಾರಿಗಳೊಂದಿಗೆ ಸೋಮವಾರ ನಡೆದ ಕುಂಭ ಮೇಳ ಪೂರ್ವಾಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳಿಗೆ ತೆರಳಿ ಜಿಲ್ಲಾಧಿಕಾರಿಗಳ ಕಚೇರಿಯ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳ ಹೊಣೆಗಾರಿಕೆ ಹಾಗೂ ಜಿಲ್ಲೆಯ ನಾಯಕತ್ವದ ಪ್ರಾಮುಖ್ಯತೆಯನ್ನು ತಿಳಿದು ನಾನು ಸಹ ಲೋಕ ಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ತೀರ್ಮಾನಿಸಿದೆ ಎಂದು ಪ್ರಿಯಾ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎನ್.ಆರ್ ವೇಣುಗೋಪಾಲ್ ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್.ನಿರ್ಮಲ ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love