ಮತದಾನ ಜಾಗೃತಿಗೆ ನಗರದಲ್ಲಿ ಕಾಲ್ನಡಿಗೆ ಜಾಥಾ
ಮಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ಮಂಗಳೂರು ನಗರದಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಜಾಗೃತಿ ಮೂಡಿಸಲು ನಗರದಲ್ಲಿ ಬೆಳ್ಳಂಬೆಳಿಗ್ಗೆ ಬೃಹತ್ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಏ.30ರ ಭಾನುವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಮ್ಮ ನಡೆ ಮತಗಟ್ಟೆ ಕಡೆಗೆ ಎಂಬ ಬೃಹತ್ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮೇ.10ರಂದು ನಗರದಲ್ಲಿರುವ ಅರ್ಹ ಮತದಾರರೆಲ್ಲರೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವಂತೆ ಅವರು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ರೋಟರಿ ಇಂಟರ್ ನ್ಯಾಷನಲ್ ಜಿಲ್ಲಾ ಗವರ್ನರ್ ರೋ. ಎನ್. ಪ್ರಕಾಶ್ ಕಾರಂತ್, ಅಂತರರಾಷ್ಟ್ರೀಯ ಲಯನ್ಸ್ ಜಿಲ್ಲಾ ದ್ವಿತೀಯ ಉಪ ರಾಜ್ಯಪಾಲ ಬಿ.ಎಂ. ಭಾರತೀ, ಅಸೋಸಿಯೇಶನ್ ಆಫ್ ಕನ್‍ಸಲ್ಟಿಂಗ್ ಇಂಜಿನಿಯರಿಂಗ್ ವಿಭಾಗದ ಅಧ್ಯಕ್ಷ ಸತ್ಯರಂಜನ್ ರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ನೂರಾರು ಸಂಖ್ಯೆಯ ನಾಗರೀಕರು ಜಾಥಾದಲ್ಲಿ ಭಾಗವಹಿಸಿದ್ದರು.