ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣ:   ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Spread the love

ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣ:   ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
 

ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ನಡೆದಿದ್ದ ಮತದಾನದ ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸುರತ್ಕಲ್‌ನ ಎನ್‌ಐಟಿಕೆಯ ಸ್ಟ್ರಾಂಗ್ ರೂಂನಲ್ಲಿ ಬಿಗಿ ಭದ್ರತೆ, ಸಿಸಿ ಕಣ್ಗಾವಲಿನಲ್ಲಿ ಇರಿಸಲಾಗಿರುವ ಇವಿಎಂ ಹಾಗೂ ಅಂಚೆ ಮತಪತ್ರಗಳ ಎಣಿಕೆಯ ಸಂದರ್ಭ ಎಣಿಕೆ ಕೇಂದ್ರಕ್ಕೆ ಚುನಾವಣಾ ಆಯೋಗದ ಅಧಿಕೃತ ಗುರುತಿನ ಚೀಟಿಯವರಿಗೆ 3 ಹಂತದ ತಪಾಸಣೆಯೊಂದಿಗೆ ಪ್ರವೇಶ ದೊರೆಯಲಿದೆ ಎಂದು ದ.ಕ.  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಮತ ಎಣಿಕೆ ಸಿದ್ಧತೆಗಳ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಡಿಸಿ, ಮತ ಎಣಿಕೆ ಕೇಂದ್ರದಲ್ಲಿ ಭದ್ರತಾ ಕೊಠಡಿಯು ಬೆಳಗ್ಗೆ 6ರಿಂದ 7ರ ಅವಧಿಯಲ್ಲಿ ತೆರೆಯಲಾಗುತ್ತದೆ ಎಂದರು.

ಅಂದು ಬೆಳಗ್ಗೆ 8ಕ್ಕೆ ಆರಂಭದಲ್ಲಿ ಅಂಚೆ ಮತಗಳ ಎಣಿಕೆ, ಬಳಿಕ ಇವಿಎಂ ಮತ ಎಣಿಕೆ 8.30ಕ್ಕೆ ಆರಂಭವಾಗಲಿದೆ. ಕೇಂದ್ರದ ಸುತ್ತಲು 100 ಮೀ. ಅಂತರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ವಲಯವನ್ನು ಪಾದಚಾರಿ ವಲಯ ಎಂದು ಘೋಷಿಸಲಾಗಿದೆ. ಮತ ಎಣಿಕೆ ಕೇದ್ರದ ಸುತ್ತ ಹಾಗೂ ಎಣಿಕೆ ಕೇಂದ್ರದ ಕೊಠಡಿಯೊಳಗೆ ಸಿಸಿಟಿವಿ ಕಣ್ಗಾವಲಿದೆ. ಎಣಿಕೆ ಪ್ರಕ್ರಿಯೆ ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಸಲು ಪ್ರತಿ ಎಣಿಕೆ ಮೇಜಿನ ಸಿಬ್ಬಂದಿ ಮತ್ತು ಏಜೆಂಟರ ಮಧ್ಯೆ ಸ್ಟೀಲ್ ಪ್ರೇಮ್ ಜಾಲರಿ ಅಳವಡಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಚುನಾವಣಾ ಏಜೆಂಟರು ಬೆಳಗ್ಗೆ 6ರಿಂದ 7 ಗಂಟೆಯೊಳಗೆ ಪ್ರವೇಶಿಸಿರಬೇಕು. ಬಳಿಕ ಅವಕಾಶ ನೀಡಲಾಗದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ದ.ಕ. ಜಿಲ್ಲೆಯಲ್ಲಿ ಇವಿಎಂಗಳಲ್ಲಿ 14,09,653 ಮತಗಳು ಚಲಾವಣೆಯಾಗಿದ್ದು, ಮನೆಯಿಂದಲೇ ಮತದಾನ, ಸೇವಾ ಮತದಾರರು, ತುರ್ತು ಸೇವೆಯಲ್ಲಿರುವವರು ಸೇರಿದಂತೆ ಮತ ಪತ್ರಗಳ ಮೂಲಕ 8537 ಮತ ಚಲಾವಣೆಯಾಗಿದೆ. ಸೇವಾ ಮತದಾರರಿಗೆ ಒಟ್ಟು 536 ಮತಪತ್ರಗಳನ್ನು ಕಳುಹಿಸಲಾಗಿದ್ದು, ಈವರೆಗೆ 231 ಮತಪತ್ರಗಳು ಸ್ವೀಕೃತವಾ ಗಿದ್ದು, ಮತ ಎಣಿಕೆ ಆರಂಭಕ್ಕಿಂತ ಒಂದು ಗಂಟೆ ಮುಂಚಿತವಾಗಿ ಸ್ವೀಕೃತವಾಗುವ ಸೇವಾ ಮತದಾರರ ಮತಪತ್ರ ಗಳನ್ನು ಸ್ವೀಕರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇವಿಎಂಗಳ ಮತ ಎಣಿಕೆಯು ಪ್ರತಿ ವಿಧಾನಸಭಾ ಕ್ಷೇತ್ರವಾರು ಎಂಟು ಕೊಠಡಿಗಳಲ್ಲಿ ತಲಾ 14 ಟೇಬಲ್‌ಗಳಂತೆ ಒಟ್ಟು 112 ಟೇಬಲ್‌ಗಳಲ್ಲಿ ನಡೆಯಲಿದೆ. ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ 20 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಇವಿಎಂ ಮತ ಎಣಿಕೆಗಾಗಿ ಚುನಾವಣಾಧಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಎಣಿಕೆ ಕೇಂದ್ರದಲ್ಲಿ ಒಟ್ಟು 554 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.

ಮತ ಎಣಿಕೆ ಕೇಂದ್ರಕ್ಕೆ ಈ ವಸ್ತುಗಳು ನಿಷೇಧ

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್, ಐಪ್ಯಾಡ್, ಕ್ಯಾಲ್ಕುಲೇಟರ್, ಕತ್ತರಿ, ಚೂರಿ, ಲೈಟರ್, ಬೆಂಕಿಪೊಟ್ಟಣ, ಇಲೆಕ್ಟ್ರಾನಿಕ್ ವಸ್ತುಗಳು, ಶಸ್ತ್ರಾಸ್ತ್ರ, ಸ್ಫೋಟಕಗಳು ನಿಷೇಧಿಸಲ್ಪಟ್ಟಿದ್ದು, ಅಭ್ಯರ್ಥಿಗಳು ಅಥವಾ ಏಜೆಂಟರು ಕೇವಲ ಪೆನ್, ಹಾಳೆ ನೋಟ್‌ಪ್ಯಾಡ್ ಹಾಗೂ 17ಸಿ ಫಾರಂ ಮಾತ್ರವೇ ಕೊಂಡೊಯ್ಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುರತ್ಕಲ್‌ನ ಎನ್‌ಐಟಿಕೆಯ ಭದ್ರತಾ ಕೊಠಡಿಗೆ ಮೂರು ಪಾಳಿಯಲ್ಲಿ ಭದ್ರತೆ ಒದಗಿಸಲಾಗಿದೆ. ಪ್ರತೀ ಪಾಳಿಯಲ್ಲಿ ಸಿವಿಲ್ ಪೊಲೀಸರು, ರಾಜ್ಯ ಮೀಸಲು ಪೊಲೀಸ್ ಪಡೆಯ ಪೊಲೀಸರು ಮೂರು ಹಂತದಲ್ಲಿ ಭದ್ರತೆಯನ್ನು ಒದಗಿಸುತ್ತಿದ್ದಾರೆ. ಡಿಸಿಪಿ, ಎಸಿಪಿ ಸೇರಿದಂತೆ ಒಟ್ಟು 850 ಪೊಲೀಸ್ ಸಿಬ್ಬಂದಿ ಮತ ಎಣಿಕೆ ದಿನದಂದು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದರು.

ದೂರು ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ ಎಣಿಕೆಗೆ ಸಂಬಂಧಿಸಿ ದೂರು ಸಲ್ಲಿಸಲು ಅಥವಾ ಮಾಹಿತಿ ಪಡೆಯಲು ಜೂ. 1ರಿಂದ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಸಾರ್ವಜನಿಕರು ಈ ಸಂಬಂಧ 1950 ಸಹಾಯವಾಣಿಯನ್ನು ಸಂಪರ್ಕಿಸಬಹುದು.

ಪಾರ್ಕಿಂಗ್ ವ್ಯವಸ್ಥೆ

*ಅಭ್ಯರ್ಥಿ ಹಾಗೂ ಏಜೆಂಟರಿಗೆ ಪ್ರಮುಖ ದ್ವಾರದ ಮಹಿಳಾ ಹಾಸ್ಟೆಲ್ ಪಕ್ಕದಲ್ಲಿ.

*ಕೌಂಟಿಂಗ್ ಏಜೆಂಟ್ ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಅಡ್ಕ ಸರ್ಕಲ್ ಬಳಿಯ ಸ್ಟೇಡಿಯಂ ಬಳಿ.

ಜೂ.4ರಂದು ರಾತ್ರಿ 12ರವರೆಗೆ ವಿಜಯೋತ್ಸವ ನಿಷೇಧ

ಚುನಾವಣಾ ಫಲಿತಾಂಶದ ದಿನದಂತು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು, ಪಟಾಕಿ ಸಿಡಿಸುವುದನ್ನು ಜೂ. 4ರ ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.


Spread the love