ಮಳೆಗಾಲದಲ್ಲಿ ಯಾವುದೇ ಅವಘಡಗಳಾದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

Spread the love

ಮಳೆಗಾಲದಲ್ಲಿ ಯಾವುದೇ ಅವಘಡಗಳಾದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಮುಂಗಾರು ಪೂರ್ವವೇ ಮಳೆಯಾಗುತ್ತಿದೆ, ಕೆಲವೇ ದಿನಗಳಲ್ಲಿ ಮುಂಗಾರು ಕೂಡ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪ್ರಾಕೃತಿಕವಾಗಿ ಹಾಗೂ ಮಾನವನಿಂದಾಗುವ ಅವಘಡಗಳು ಸಂಭವಿಸದಂತೆ ಎಲ್ಲಾ ರೀತಿಯ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಟ್ಟಡ ನಿರ್ಮಾಣಕ್ಕೆ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬಂದಿದ್ದಾರೆ, ಮಳೆಗಾಲದ ಸಂದರ್ಭದಲ್ಲಿ ಖಾಸಗಿ ಕಟ್ಟಡ ನಿರ್ಮಾಣಕಾರರು ಅವರ ತಂಗುವಿಕೆಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸರ್ಕಾರದ ಏಜೆನ್ಸಿಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಿಸುವ ಕೆಲಸಗಾರರಿಗೆ ಉತ್ತಮ ವ್ಯವಸ್ಥೆ ಮಾಡಿಕೊಡಬೇಕು, ಕಟ್ಟಡ ನಿರ್ಮಾಣದ ಸ್ಥಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು, ಈ ಬಗ್ಗೆ ಸಂಬಂಧಪಟ್ಟವರು ಖಚಿತಪಡಿಸಿಕೊಳ್ಳಬೇಕು, ಅದೇ ರೀತಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಯಾವುದೇ ಕಾರ್ಮಿಕರಿಗೆ ತೊಂದರೆ ಆಗದಂತೆ ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಉಪ ನಿರ್ದೇಶಕ ರಾಜೇಶ್ ಮಿಶ್ರಿಕೋಟೆ ಅವರು ಸಂಬಂಧಿಸಿದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಯಾವುದೇ ರೀತಿಯ ಅವಘಡಗಳು ಆಗದಂತೆ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಕುರಿತು ಪರಿಶೀಲಿಸುವಂತೆ ನಿರ್ದೇಶನ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಹಲವು ರಸ್ತೆ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ, ಮಳೆ ಸುರಿಯುತ್ತಿರುವ ಕಾರಣ ಅಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿಗಳು ಯಾವುದೇ ಅವಘಡಗಳು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು, ಆ ವ್ಯಾಪ್ತಿಯಲ್ಲಿ ನಿಗಧಿಪಡಿಸಿದ ವೇಗದಲ್ಲಿಯೇ ಸಂಚರಿಸಬೇಕು, ಮಿತಿಮೀರಿದ ವೇಗದಲ್ಲಿ ಸಂಚರಿಸದಂತೆ ಎಚ್ಚರವಹಿಸಬೇಕು, ಇತರೆ ವಾಹನ ಸವಾರರಿಗೆ ಅನುಕೂಲವಾಗುವಂತೆ ಗುರುತಿನ ಬೋರ್ಡ್‍ಗಳನ್ನು ಅಳವಡಿಸಬೇಕು, ಮಳೆಯಿಂದಾಗಿ ವಾಹನಗಳು ಸ್ಕಿಡ್ ಆಗಿ ಸವಾರ ತೊಂದರೆಗಳಾಗುವ ಸಂಭವವಿರುತ್ತದೆ ಹಾಗಾಗಿ ಯಾವುದೇ ರೀತಿಯ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಲೇ ಕೈಗೊಳ್ಳಬೇಕು, ರಸ್ತೆ ಮಾರ್ಗದಲ್ಲಿ ಮರಗಳು ಬಿದ್ದು ಸಂಚಾರಕ್ಕೆ ತೊಂದರೆಯಾದಲ್ಲಿ ಅವುಗಳನ್ನು ತೆರವುಗೊಳಿಸುವ ಉಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು. ಹೆಚ್ಚು ಮಳೆಯಿಂದಾಗಿ ರಸ್ತೆ ಸಂಪರ್ಕ ಅಥವಾ ಇನ್ನಿತರ ಸಮಸ್ಯೆಗಳು ತಲೆದೋರಿದಾಗ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲು ಸಂಬಂಧಪಟ್ಟ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಸಮಯಕ್ಕೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾತನಾಡಿ, ಜಿಲ್ಲೆಯಲ್ಲಿ ಹಳ್ಳ-ಕೊಳ್ಳಗಳ ಮೂಲಕ ಹಾದುಹೋಗುವ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು, ಇದರಿಂದ ಮಳೆಗಾಲದ ಸಂದರ್ಭದಲ್ಲಿ ಸಂಬಂಧಿಸಿದ ಶಾಲೆಗಳಿಗೆ ರಜೆ ಘೋಷಿಸಲು ಅನುಕೂಲವಾಗಲಿದೆ ಎಂದರು.

ನಂತರ ಜಿಲ್ಲಾಧಿಕಾರಿಯವರು ಮಾತನಾಡಿ, ಜಿಲ್ಲೆಯಲ್ಲಿ ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿಗೆ 1.50ಲಕ್ಷ ರೂ.ಗಳ ಅನುದಾನ ನೀಡಲಾಗುವುದು. ಯಾವುದೇ ತುರ್ತು ಕಾಮಗಾರಿ ಅವಶ್ಯಕತೆಯಿದ್ದಲ್ಲಿ ವರದಿ ನೀಡಬೇಕು, ಅಂತಹ ಶಾಲೆಗಳಿಗೆ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು. ಸಂಭವನೀಯ ಭೂಕುಸಿತ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚರವಹಿಸಬೇಕು, ಅದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಅಲ್ಲಿ ಜನರಿದ್ದರೆ ಅವರನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು, ಯಾವುದೇ ರೀತಿಯ ಅವಘಡಗಳು ಸಂಭವಿಸಿದಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ .ಆರ್. ಎಫ್ ಮಾರ್ಗಸೂಚಿಗಳಂತೆ ಪರಿಹಾರವನ್ನು ಕೂಡಲೇ ನೀಡಬೇಕು, ಇದಕ್ಕಾಗಿ ಜಿಲ್ಲೆಯ ಪ್ರತಿಯೊಂದು ತಾಲೂಕುಗಳ ತಹಶೀಲ್ದಾರರ ಖಾತೆಯಲ್ಲಿ 50 ಲಕ್ಷ ರೂ.ಗಳ ಅಗತ್ಯ ಅನುದಾನ ಲಭ್ಯವಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಗತ್ಯವಿರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಲೇ ಅಗತ್ಯ ಸ್ಥಳಗಳನ್ನು ಗುರುತಿಸಿಕೊಳ್ಳುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಯವರು ಸಿಬ್ಬಂದಿಗಳನ್ನು ಸಜ್ಜುಗೊಳಿಸಿಟ್ಟಿರುವಂತೆ ಸೂಚಿಸಿದರು.

ಮಳೆಗೆ ಬೆಳೆ ನಾಶವಾದ ಸಂದರ್ಭದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಿದ್ಧಪಡಿಸಿ, ನೀಡಬೇಕು, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು ಈ ಬಗ್ಗೆ ಆರೋಗ್ಯ ಇಲಾಖೆ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು, ಸಮುದ್ರÀಗಳಲ್ಲಿ ಯಾರೂ ಕೂಡ ಇಳಿಯದಂತೆ ಎಚ್ಚರ ವಹಿಸಬೇಕು, ಬೀಚ್‍ಗಳಲ್ಲಿ ಕಾವಲಿಗೆ ಪೊಲೀಸ್ ಹಾಗೂ ಹೋಂಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ತಿಳಿಸಿದರು.

ಎಂ.ಆರ್.ಪಿ.ಎಲ್ ಹಾಗೂ ಎನ್.ಎಮ್.ಪಿ.ಟಿ ಗಳಲ್ಲಿ ಇತರೆ ಯಾವುದೇ ರೀತಿಯ ಅವಘಡಗಳು ಸಂಭವಿಸಲು ಆಸ್ಪದ ನೀಡಬಾರದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲೀ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು, ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಉಪ ನಿರ್ದೇಶಕರು ಅಲ್ಲಿನ ಸುರಕ್ಷತೆಗಳ ಬಗ್ಗೆ ಗಮನಹರಿಸಬೇಕು, ವಿಫಲ ಕೊಳವೆ ಬಾವಿಗಳನ್ನು ಪತ್ತೆ ಮಾಡಿ ಅವುಗಳನ್ನು ಮುಚ್ಚಬೇಕು. ಮಾನ್ಸೂನ್ ಅವಧಿಯಲ್ಲಿ ಮೀನುಗಾರರಿಗೆ ಕಾಲಕಾಲಕ್ಕೆ ಅಗತ್ಯ ಮಾಹಿತಿ ನೀಡಲಾಗುವುದು ಎಂದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಹರಿರಾಂ ಶಂಕರ್, ಸಹಾಯಕ ಪೊಲೀಸ್ ಆಯುಕ್ತ ಮದನ್ ಮೋಹನ್ ವೇದಿಕೆಯಲ್ಲಿದ್ದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ಎಲ್ಲಾ ತಾಲೂಕಿನ ಹಿರಿಯ ಅಧಿಕಾರಿಗಳು ಆನ್‍ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.


Spread the love