ಮಳೆ ಹಾನಿ: ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ

Spread the love

ಮಳೆ ಹಾನಿ: ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ

ಮಂಗಳೂರು:  ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಜು.15ರ ಶುಕ್ರವಾರ ದೇವನಹಳ್ಳಿಯ ಬಳಿ ಇರುವ ಖಾಸಗಿ ಹೋಟೆಲ್‍ನಿಂದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಸಂವಾದದ ಮುಖ್ಯಾಂಶಗಳು ಇಂತಿವೆ.

ಮಳೆಯಿಂದ ಹಾನೀಗೀಡಾದ ಮನೆಗಳಿಗೆ ತುರ್ತು ಪರಿಹಾರ 10 ಸಾವಿರ ರೂ.ಗಳನ್ನು ನೀಡಬೇಕು, ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳುವುದು.

ರಸ್ತೆ, ಸೇತುವೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಬೇಕು, ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು.

ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸಮೀಕ್ಷೆ ಸರಿಯಾಗಿ ಆಗಬೇಕು ಎಂದು ಸೂಚಿಸಿದರು.

ಇತರೆ ಸೂಚನೆಗಳು:
ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಹಾಗೂ ಮಳೆ ಮುನ್ಸೂಚನೆಯನ್ನು ಗಮನಿಸಬೇಕು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು.

ಪರಿಹಾರ ಕಾರ್ಯಗಳು ತ್ವರಿತ ಹಾಗೂ ಪಾರದರ್ಶಕ ವಾಗಿರಬೇಕು. ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು.

ಭೂಕುಸಿತದ ಸಾಧ್ಯತೆಗಳುಳ್ಳ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸುವುದು ಹಾಗೂ ದುರ್ಬಲ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸಬೇಕು ಹಾಗೂ ಕೂಡಲೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ವಹಿಸುವುದು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೆÇೀರ್ಸ್ ರಚಿಸುವುದು. ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ನಿಯಂತ್ರಣಾ ಕೊಠಡಿಗಳು ಭಾರಿ ಮಳೆ ಹಾಗೂ ಪ್ರವಾಹ ಸ್ಥಿತಿಯ ಕುರಿತ ಅಹವಾಲುಗಳಿಗೆ ಸ್ಪಂದಿಸುವುದು.

ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳಿಗೆ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವನ್ನು ಒದಗಿಸಿ ತೊಂದರೆಗೀಡಾದ ಪ್ರದೇಶಗಳಿಗೆ ತಕ್ಷಣವೇ ತಲುಪಲು ಕ್ರಮ ವಹಿಸಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಮೇಲ್ವಿಚಾರಣೆ ಕೈಗೊಳ್ಳಬೇಕು.

ಸಂಬಂಧಿಕರ ಮನೆಗಳಿಗೆ ತೆರಳಿರುವ ಸಂತ್ರಸ್ತರಿಗೆ ಪಡಿತರ ಕಿಟ್‍ನ್ನು ಕಂದಾಯ ಇಲಾಖೆ ನೀಡುವ ಪಟ್ಟಿಯಂತೆ ಒದಗಿಸುವುದು.

ಜಿಲ್ಲಾಡಳಿತದ ವತಿಯಿಂದ ಹಾನಿಯಾಗಿರುವ ರಸ್ತೆ, ಸೇತುವೆ ಹಾಗೂ ಟ್ಯಾಂಕ್ ಬಂಡ್ ಗಳನ್ನು ತಾತ್ಕಾಲಿಕವಾಗಿ ತಕ್ಷಣವೇ ಸರಿಪಡಿಸಿ, ಶಾಶ್ವತ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು.

ಪ್ರಕೃತಿ ವಿಕೋಪ ಪರಿಹಾರದಡಿ ಕೈಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಕಳೆದ ಮೂರು ವರ್ಷಗಳ ಅವಧಿಯ ಮನೆಗಳ ನಿರ್ಮಾಣ ಕಾರ್ಯ ಹಾಗೂ ಅವುಗಳನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಸಬೇಕು.

ಬೆಳೆ ಹಾನಿ ಕುರಿತು ತನಿಖೆ ಕೈಗೊಂಡು ಒಂದು ತಿಂಗಳೊಳಗೆ ಇನ್ ಪುಟ್ ಸಬ್ಸಿಡಿ ವಿತರಿಸಬೇಕು.

ಕಾಳಜಿ ಕೇಂದ್ರಗಳಲ್ಲಿರುವ ಸಂತ್ರಸ್ತರಿಗೆ ಸರ್ಕಾರಿ ಆದೇಶದಲ್ಲಿ ನೀಡಿರುವ ಆಹಾರ ಪಟ್ಟಿಯನ್ನು ಅನುಸರಿಸಬೇಕು ಎಂಬ ನಿರ್ದೇಶನ ನೀಡಿದರು.

ನಂತರ ಕಂದಾಯ ಸಚಿವರಾದ ಆರ್. ಅಶೋಕ್ ಮಾತನಾಡಿ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಮಲೆಕ್ಕಾಧಿಕಾರಿ ತಮ್ಮ ಗ್ರಾಮ ವ್ಯಾಪ್ತಿಯಲ್ಲಿರುವ ಮನೆಗಳು ಹಾಗೂ ಇತರೆ ತಡೆಗೋಡೆಗಳು ಅಪಾಯದಲ್ಲಿದ್ದರೆ ಅವುಗಳನ್ನು ಪತ್ತೆ ಮಾಡಬೇಕು ಹಾಗೂ ಅವುಗಳನ್ನು ನೆಲಸಮಗೊಳಿಸಲು ಕ್ರಮವಹಿಸಬೇಕು, ಆ ಮೂಲಕ ಮುಂದೆ ಆಗಬಹುದಾದದ ಜೀವಹಾನಿಯನ್ನು ತಪ್ಪಿಸಬೇಕು, ಜತೆಗೆ ಸಂಬಂಧಿಸಿದ ಫಲಾನುಭವಿಗೆ ಪರಿಹಾರವನ್ನು ನೀಡಬೇಕು, ಜಿಲ್ಲಾಧಿಕಾರಿಗಳು ಇದನ್ನು ಗಮನಿಸಬೇಕು ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಿಪತ್ತು ಪರಿಹಾರ ಘಟಕದ ಡಾ.ಮನೋಜ್ ಬೆಂಗಳೂರಿನಿಂದ ಭಾಗವಹಿಸಿದ್ದರು.

ಮಂಗಳೂರಿನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ನಾಯಕ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.


Spread the love