Home Mangalorean News Kannada News ಮಳೆ ಹಾನಿ ಸಂತ್ರಸ್ಥರಿಗೆ ಪರಿಹಾರವನ್ನು ಶೀಘ್ರವಾಗಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಮಳೆ ಹಾನಿ ಸಂತ್ರಸ್ಥರಿಗೆ ಪರಿಹಾರವನ್ನು ಶೀಘ್ರವಾಗಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ್

Spread the love

ಮಳೆ ಹಾನಿ ಸಂತ್ರಸ್ಥರಿಗೆ ಪರಿಹಾರವನ್ನು ಶೀಘ್ರವಾಗಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ ಸೇರಿದಂತೆ ಮನೆ ಹಾನಿಯ ಬಗ್ಗೆ ಅಧಿಕಾರಿಗಳು ಪರಿಶಿಲಿಸಿ , ನಷ್ಟ ಅಂದಾಜಿಸುವುದರೊಂದಿಗೆ , ಸರಕಾರದ ಮಾರ್ಗ ಸೂಚಿಯಂತೆ ಬಾಕಿ ಉಳಿದ ನಷ್ಟ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತತ ಸಾಲಿನ ಮುಂಗಾರಿನಲ್ಲಿ ಈವರೆಗೆ 5040 ಮಿ.ಮಿ ಮಳೆಯಾಗಿದ್ದು ವಾಡಿಕೆ ಮಳೆಗಿಂತ ಶೇ 16 ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ರಸ್ತೆ , ಸೇತುವೆ ಕೃಷಿ , ತೋಟಗಾರಿಕೆ ಬೆಳೆ, ಮನೆ ಹಾನಿ ಸೇರಿದಂತೆ ಮತ್ತಿತರ ಹಾನಿಯಾಗಿ ಅಂದಾಜು ರೂ. 334.2 ಕೋಟಿ ಯಷ್ಟು ಹಾನಿಯಾಗಿದೆ.

ಮುಂದಿನ ದಿನಗಳಲ್ಲಿ ತೀವ್ರತರವಾಗಿ ಮಳೆ ಬಂದು ಹಾನಿಗೊಳಗಾದಾಗ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದ ಅವರು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರೂ ಸಹ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಉಡುಪಿ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಮನೆಗಳು ಮುಳುಗಿದ್ದು, ಇವುಗಳನ್ನು ಗುರುತಿಸಿಕೊಂಡಲ್ಲಿ , ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ, ನೀರಿನ ಹರಿವು ಸರಾಗವಾಗಿ ಹರಿಯುವಂತೆ ನಾಲಾಗಳು ಸುವ್ಯವಸ್ಥೆಯಲ್ಲಿರುವಂತೆ ನೋಡಿಕೊಳ್ಳಬೇಕು, ಒತ್ತುವರಿಯಾಗಿರುವ ಬಗ್ಗೆಯೂ ಪರಿಶೀಲಿಸುವಂತೆ ನಗರಸಭೆಯ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಕಳೆದ ತಿಂಗಳು ಮಳೆಯಿಂದಾಗಿ ತೊಂದರೆಗೊಳಗಾದ ಜನರ ರಕ್ಷಣಾ ಕಾರ್ಯವನ್ನು ಅಧಿಕಾರಿಗಳು, ಮೀನುಗಾರರು, ಸ್ವಯಂ ಸೇವಕರು ಉತ್ತಮವಾಗಿ ಕಾರ್ಯನಿರ್ವಹಿಸುವುದರೊಂದಿಗೆ , 800 ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಪ್ರವಾಹದಿಂದ ರಕ್ಷಿಸುವ ಕಾರ್ಯ ನೆರೆವೇರಿಸಿದ್ದು ಇವರಿಗೆ ಜಿಲ್ಲಾಡಳಿತದಿಂದ ಅಭಿನಂದನೆಗಳನ್ನು ತಿಳಿಸಿದರು.

ಅಗ್ನಿಶಾಮಕ ದಳದಲ್ಲಿ ಅಗತ್ಯವಿದ್ದಲ್ಲಿ ಹೆಚ್ಚಿನ ಬೋಟ್ ಗಳನ್ನು ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಹಾಗೂ ತರಬೇತಿಯನ್ನೂ ಸಹ ನೀಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು


Spread the love

Exit mobile version