ಮಹಿಳಾ ಸಬಲೀಕರಣಕ್ಕೆ ಉತ್ತೇಜನ: ಸಿಎಂ ಬೊಮ್ಮಾಯಿ

Spread the love

ಮಹಿಳಾ ಸಬಲೀಕರಣಕ್ಕೆ ಉತ್ತೇಜನ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಸ್ವಸಹಾಯ ಗುಂಪುಗಳಿಗೆ 100 ಕೋಟಿ ಹಣ ನೀಡಲಾಗಿದ್ದು, ಈ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಕೌಶಲ್ಯಾಭಿವದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವತಿಯಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸಾಮರ್ಥ್ಯ – ನಮೋ ಸ್ತ್ರೀ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಲಾಗಿದ್ದು, ಜೀವನದ ಗುಣಮಟ್ಟ ಹೆಚ್ಚಾಗಬೇಕು. ಈ ಮೂಲಕ ಮಹಿಳೆಯರಿಗೆ ಸಮಾಜದಲ್ಲಿ ಗೌರವ ಸಿಗುವಂತಾಗಬೇಕು. ಹೆಚ್ಚಿನ ಲಾಭ ಗಳಿಸುವುದರ ಮೂಲಕ ಸ್ತ್ರೀ ಸಂಘಗಳು ಸಬಲರಾಗಬೇಕು ಎಂದು ಹೇಳಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳ ಮೂಲಕ ಅವಕಾಶವನ್ನು ಕಲ್ಪಿಸಿ ಕೊಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ತ್ರೀ ಶಕ್ತಿ ಸಬಲೀಕರಣಕ್ಕಾಗಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ.
ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸ್ಯಾನಿಟರಿ ನ್ಯಾಪ್‍ಕಿನ್ ಎಲ್ಲಾ ಜಿಲ್ಲೆಗಳಲ್ಲಿಯೂ ಉತ್ಪಾದನೆಯಾಗುತ್ತಿದ್ದು, ಕಡಿಮೆ ಬೆಲೆಗೆ ಸಿಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

ಸ್ತ್ರೀ ಸಾಮರ್ಥ್ಯ ಬ್ರಾಂಡ್ ನೋಡಿದ್ರೆ ಜನ ಉತ್ಪನ್ನಗಳನ್ನು ಖರೀದಿಸುವಂತಾಗಬೇಕು ಈ ರೀತಿ ಆದಾಗ ನಿಮಗೆ ಶಾಶ್ವತ ಉದ್ಯೋಗ ಸಿಗುತ್ತದೆ. ಇದರಿಂದ ಆರ್ಥಿಕ ಕ್ರಾಂತಿ ಹಾಗೂ ಸಾಮಾಜಿಕ ಕ್ರಾಂತಿಗೆ ಹೆಚ್ಚು ಒತ್ತು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಉನ್ನತ ಶಿಕ್ಷಣ, ಐ.ಟಿ. ಬಿಟಿ, ಕೌಶಲ್ಯಾಭಿವೃದ್ದಿ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಮಾತನಾಡಿ, ರೈತರು ದೇಶದ ಬೆನ್ನೆಲಬು ಅದೇ ರೀತಿ ಮಹಳೆಯರು ಸಮಾಜದ ಬೆನ್ನೆಲುಬಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ನರೇಗಾ, ಸ್ವಚ್ಚಭಾರತ ವಿವಿಧ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಕಾಶ ನೀಡಲಾಗುತ್ತಿದೆ. ಮಹಳೆಯರ ಸಬಲೀಕರಣಕ್ಕಾಗಿ ಸರ್ಕಾರವು ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ: ಎಸ್.ಸೆಲ್ವಕುಮಾರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here