ಮೇ 10 ಮತ ಒತ್ತು – ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Spread the love

ಮೇ 10 ಮತ ಒತ್ತು – ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡಬೇಕು. ಮತದಾನ ದಿನವನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10 ಮತ ಒತ್ತು ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡಬೇಕು ಎಂದು ಉಡುಪಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ತಿಳಿಸಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ ಉಡುಪಿಯ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ‘ಪ್ರಜಾಪ್ರಭುತ್ವದ ಹಬ್ಬ -ಮೇ 10 ಮತದಾನ’ ಎಂಬ ಧ್ಯೇಯ ವಾಕ್ಯದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಎಲ್ಲಾ ಮತದಾರರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ತಾವು ಮತದಾನ ಮಾಡ ಬೇಕಾದ ಮತಗಟ್ಟೆಯ ವಿಳಾಸವನ್ನು ಮೊದಲೇ ತಿಳಿದುಕೊಳ್ಳುವುದರಿಂದ ಮತದಾನ ದಿನದಂದು ಮತಗಟ್ಟೆ ಕುರಿತ ಯಾವುದೇ ಗೊಂದಲಗಳಿಗೆ ಒಳಗಾಗದೇ ಸುಲಭವಾಗಿ ಮತದಾನ ಮಾಡಲು ಸಾಧ್ಯವಿದೆ. ಈ ಮಾಹಿತಿಯನ್ನು ತಮ್ಮ ವ್ಯಾಪ್ತಿಯ ಬಿಎಲ್‌ಓಗಳ ಬಳಿ, ಚುನಾವಣಾ ಆಯೋಗದ ವೋಟರ್ ಹೆಲ್ಪ್‌ಲೈನ್ ಆಪ್ ಮೂಲಕ ಅಥವಾ ಉಚಿತ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಸ್ವೀಪ್ ವತಿಯಿಂದ ಈಗಾಗಲೇ ಹಲವು ವಿನೂತನ ಕಾರ್ಯಕ್ರಮಗಳ ಮೂಲಕ, ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದು, ಮತದಾರರು ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಶತಾಯುಷಿ ಮತದಾರರೂ ಸಹ ಉತ್ಸಾಹದಿಂದ ಮತದಾನ ಪ್ರಕ್ರಿಯೆಲ್ಲಿ ಭಾಗವಹಿಸುತ್ತಿದ್ದು, ಎಲ್ಲಾ ಯುವ ಮತದಾರರು ತಮ್ಮ ಮೊದಲ ಬಾರಿಯ ಮತವನ್ನು ತಪ್ಪದೇ ಚಲಾಯಿಸಬೇಕು ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲೆಯ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲಾ ಯುವಜನತೆಯ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸ ಲಾಗಿದೆ. ಯುವಜನತೆ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸೂಕ್ತ ರೀತಿಯಲ್ಲಿ ಚಲಾಯಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಯಟ್‌ನ ಪ್ರಾಂಶುಪಾಲ ಗೋವಿಂದ ಮಡಿವಾಳ, ಉಪ ಪ್ರಾಂಶುಪಾಲ ಡಾ.ಅಶೋಕ್‌ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಾ ಮತ್ತು ಶಾಲೆಯ ಶಿಕ್ಷಕ ವೃಂದ, ಬಿಎಲ್‌ಓಗಳು ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಬನ್ನಂಜೆಯಿಂದ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು. ಡಿಡಿಪಿಐ ಗಣಪತಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.


Spread the love