ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬೊಮ್ಮಾಯಿ ಆದೇಶ

Spread the love

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬೊಮ್ಮಾಯಿ ಆದೇಶ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಇಡೀ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಗೆ ಬಂದಿಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ಶಿಕ್ಷೆ ಸಿಗುವುದು ಖಂಡಿತ, ಈ ನಿಟ್ಟಿನಲ್ಲಿ ಕೂಡಲೇ ಪೊಲೀಸರು ಕಾರ್ಯತತ್ಪರರಾಗಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ.

ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಸಭೆ: ಘಟನೆ ಮೈಸೂರು ಸೇರಿದಂತೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಇಂದು ಸಂಜೆ ಅಧಿಕಾರಿಗಳು, ಜನಪ್ರತಿನಿಧಿಗಳ ತುರ್ತು ಸಭೆ ಕರೆದಿದ್ದಾರೆ. ಅದರಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚೆಯಾಗಲಿದೆ.

ನಾಳೆ ಗೃಹ ಸಚಿವರ ಭೇಟಿ: ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ ಸೂಕ್ತ ನಿರ್ದೇಶನ ನೀಡಲು ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ ನಾಳೆ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿತ್ತು

ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಳೆ. ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ನಿರ್ಜನ ಪ್ರದೇಶಕ್ಕೆ ನಿನ್ನೆ ಸಂಜೆ ಇಬ್ಬರು ತೆರಳಿದ್ದರು.

ಈ ವೇಳೆ ಅಲ್ಲಿಗೆ ಬಂದ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.


Spread the love