ಯುವನಿಧಿ ಯೋಜನೆಗೆ ಉಡುಪಿ ಜಿಲ್ಲೆಯ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Spread the love

ಯುವನಿಧಿ ಯೋಜನೆಗೆ ಉಡುಪಿ ಜಿಲ್ಲೆಯ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣೀ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಅರ್ಹ 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೇ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಈ ಯೋಜನೆಯನ್ನು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ, ರಾಜ್ಯದಲ್ಲಿ ವಾಸವಾಗಿರುವವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ಪ್ರತೀ ತಿಂಗಳು 3000 ರೂ., ಡಿಪ್ಲೋಮಾ ಪದವೀಧರರಿಗೆ ಪ್ರತೀ ತಿಂಗಳು 1500 ರೂ. ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಅರ್ಜಿ ಸಲ್ಲಿಸಿದಾಗಿನಿಂದ ಉದ್ಯೋಗ ದೊರೆಯುವ ವರೆಗೆ ಅಥವಾ 2 ವರ್ಷ ಗರಿಷ್ಠ ಅವಧಿಗೆ ಮಾತ್ರ ಭತ್ಯೆ ನೀಡಲಾಗುವುದು ಎಂದರು.

ಅರ್ಜಿ ಸಲ್ಲಿಸುವಾಗ ಮತದಾರರ ಗುರುತಿನ ಚೀಟಿ, ಪದವಿ ಅಥವಾ ಡಿಪ್ಲೋಮಾದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಮತ್ತಿತರ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಿಬ್ಬಂದಿ ಪೃಥ್ವಿರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love