ಲೈಂಗಿಕ ಕಿರುಕುಳ ಪ್ರಕರಣ: ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ನನ್ನು ವಶಕ್ಕೆ ಪಡೆದ ಪೊಲೀಸರು

Spread the love

ಲೈಂಗಿಕ ಕಿರುಕುಳ ಪ್ರಕರಣ: ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ನನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್‌ ನನ್ನು ಮಹಿಳಾ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿರುವುದಾಗಿ ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಜಿಲ್ಲಾ ಆಯುಷ್ಮಾನ್ ನೋಡಲ್ ಅಧಿಕಾರಿ, ಕುಷ್ಠರೋಗ ನಿವಾರಣಾ ವಿಭಾಗದ ಅಧಿಕಾರಿಯೂ ಆಗಿರುವ ಡಾ. ರತ್ನಾಕರ್ ಕೆಲವು ತಿಂಗಳ ಹಿಂದೆ ಸರಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರಲಾಗಿದೆ. ಈ ಮಧ್ಯೆ ಸಂತ್ರಸ್ಥೆ ಯುವತಿಯ ಪರವಾಗಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡ ಮಹಿಳೆಯೊಬ್ಬರು ಶುಕ್ರವಾರ ನೀಡಿದ ದೂರನ್ನು ದಾಖಲಿಸಿಕೊಂಡ ಮಹಿಳಾ ಪೊಲೀಸರು ಆರೋಪಿ ಅಧಿಕಾರಿ ಡಾ.ರತ್ನಾಕರ್‌ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

‘ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ವಿಷಯವು ಮಾಧ್ಯಮಗಳಲ್ಲಿ ಬಹಿರಂಗಗೊಂಡರೂ ಕೂಡ ಭವಿಷ್ಯದ ಹಿತದೃಷ್ಟಿಯಿಂದ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ದೂರು ನೀಡಲು ಹಿಂದೇಟು ಹಾಕಿದ್ದಾರೆ. ಆದರೆ ಮುಂದಿನ ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡುವೆವು ಎಂದಿದ್ದಾರೆ. ಈ ಸಂತ್ರಸ್ತರ ಪರವಾಗಿ ಮಹಿಳಾ ಸಂಘಟನೆಗಳಲ್ಲಿ ತೊಡಗಿಸಿಕೊಂಡ ಒಬ್ಬ ಮಹಿಳೆ ದೂರು ನೀಡಿದ್ದರು. ಅದರಂತೆ ವಿಚಾರಣೆಗಾಗಿ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್‌ ನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆಯ ಬಳಿಕ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು’ ಎಂದು ತಿಳಿಸಿದ್ದಾರೆ.


Spread the love