ವಿಧಾನಪರಿಷತ್ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ – ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ

Spread the love

ವಿಧಾನಪರಿಷತ್ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ – ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ

ಕುಂದಾಪುರ : ಮುಂಬರುವ ವಿಧಾನಪರಿಷತ್ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಪಕ್ಷದ ಅಭ್ಯರ್ಥಿಯನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕಾದ ಹೊಣೆಗಾರಿಗೆ ಪಕ್ಷದ ಪ್ರತಿಯೊಬ್ಬರ ಕಾರ್ಯಕರ್ತರ ಮೇಲೂ ಇದೆ. ಕಾರ್ಯಕರ್ತರು ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಲ್ಲಿ ಈ ಗುರಿ ಸಾಧಿಸುವುದು ಕಷ್ಟವಲ್ಲ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ಇಲ್ಲಿಗೆ ಸಮೀಪದ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಮಂಗಳವಾರ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಡೆದ ಜನ ಸ್ವರಾಜ್ ಯಾತ್ರೆ ಮತ್ತು ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಸಚಿವರಾಗಿ, ವಿಧಾನಪರಿಷತ್ ಸಭಾ ನಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಯಾಗಿ ವಿಧಾನಪರಿಷತ್ ನಲ್ಲಿ ಸಲ್ಲಿಸುತ್ತಿರುವ ಸೇವೆಗಳು ಶ್ಲಾಘನೀಯ. ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳ ಧ್ವನಿಯಾಗಿ ಮೇಲ್ಮನೆಯಲ್ಲಿ ಅವರು ತೋರಿರುವ ನಡವಳಿಕೆಗಳಿಂದ ಹಾಗೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆಯ ನಿಟ್ಟಿನಲ್ಲಿ ಅವರು ನಿರಂತರವಾಗಿ ನಡೆಸುತ್ತಿರುವ ಪ್ರಯತ್ನಗಳಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪಕ್ಷ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ವಿಧಾನ ಪರಿಷತ್‌ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತ್ತೊಮ್ಮೆ ಆಯ್ಕೆಯಾಗಬೇಕಾದ ಅನವಾರ್ಯತೆ ಇರುವುದರಿಂದ, ಪಕ್ಷದಿಂದ ಅಧಿಕೃತ ಅಭ್ಯರ್ಥಿ ಘೋಷಣೆ ಆಗದೆ ಇದ್ದರೂ, ಕೋಟ ಶ್ರೀನಿವಾಸ ಪೂಜಾರಿ ಅವರೇ ನಮ್ಮ ಅಭ್ಯರ್ಥಿಯಾಗಲಿದ್ದಾರೆ. ನಮ್ಮ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 344 ಬಿಜೆಪಿ ಬೆಂಬಲಿತ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿದ್ದು, ತಮ್ಮ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು ಎಂದರು.

ಕ್ಷಣಿಕ ಲಾಭಕ್ಕಾಗಿ ಯಾರು ತಲೆ ಕೊಡಬಾರದು, ಇದರಿಂದಾಗಿ ರಾಜಕೀಯ ಭವಿಷ್ಯಗಳೇ ಹಾಳಾಗುವ ಸಾಧ್ಯತೆಗಳಿವೆ. ಕ್ಷೇತ್ರದಲ್ಲಿನ ಪಕ್ಷೇತರ ಮತದಾರರ ಮತಗಳನ್ನು ಬಿಜೆಪಿ ಅಭ್ಯರ್ಥಿಯ ಪರವಾಗಿ ಬರವಂತೆ ಪ್ರಯತ್ನ ಮಾಡಬೇಕು. ಕ್ಷೇತ್ರದ ಒಂದೇ ಒಂದು ಮತಗಳು ಪೋಲಾಗದಂತೆ ಹಾಗೂ ಪಕ್ಷದ ಅಧಿಕೃತ ಅಭ್ಯರ್ಥಿಗೆ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಮಾತನಾಡಿದರು. ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ರವಿ ಅಮೀನ್, ಬಿ.ಕಿಶೋರಕುಮಾರ್ ಕುಂದಾಪುರ, ಆನಂದ ಖಾರ್ವಿ, ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಇದ್ದರು.

ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು ವಂದಿಸಿದರು.


Spread the love