
ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಜ್ಜು: ದಕ ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್.
ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ ಮೇ 10 ರಂದು ಬೆಳಿಗ್ಗೆ 07 ರಿಂದ ಸಂಜೆ 06 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು.
ಅವರು ಮೇ.9ರ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 17,81,389 ಜನ ಮತದಾರರು ತಮ್ಮ ಮತದಾನ ಹಕ್ಕು ಚಲಾಯಿಸಲಿದ್ದು, 1,860 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಮತ್ತು ಚುನಾವಣಾ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಗತ್ಯ ತರಬೇತಿ ನೀಡಿ ನಿಯೋಜಿಸಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮೇ 10 ರ ಬುಧವಾರದಂದು ಮತದಾನ ಮತ್ತು ಮೇ 13 ರ ಶನಿವಾರದಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈಗಾಗಲೇ ಮತದಾರರ ಅಂತಿಮ ಪಟ್ಟಿಯಲ್ಲಿರುವಂತೆ ಜಿಲ್ಲೆಯಲ್ಲಿ 8,70,991 ಪುರುಷ ಮತದಾರರು ಮತ್ತು 9,10,314 ಮಹಿಳಾ ಮತದಾರರು, 84 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 17,81,389 ಮತದಾರರು ಮತದಾನದ ಹಕ್ಕು ಚಲಾಯಿಸಲಿದ್ದಾರೆ ಎಂದರು.
ಮತಗಟ್ಟೆಗಳ ವಿವರ: ಜಿಲ್ಲೆಯಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 1,184 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 676 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,860 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳ್ತಂಗಡಿ 241, ಮೂಡಬಿದರೆ 221, ಮಂಗಳೂರು ಉತ್ತರ 244, ಮಂಗಳೂರು ದಕ್ಷಿಣ 224, ಮಂಗಳೂರು 210, ಬಂಟ್ವಾಳ 249, ಪುತ್ತೂರು 220 ಹಾಗೂ ಸುಳ್ಯದಲ್ಲಿ 231 ಸೇರಿದಂತೆ ಜಿಲ್ಲೆಯಲ್ಲಿ 32 ಮತಗಟ್ಟೆಗಳನ್ನು ಕ್ರಿಟಿಕಲ್ ಹಾಗೂ ವರ್ನರಬಲ್ ಎಂದು ಗುರುತಿಸಲಾಗಿದೆ. ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ ಹಾಗೂ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆಯನ್ನೂ ಮಾಡಲಾಗಿದೆ. ಮತಗಟ್ಟೆಯ ಸಿಬ್ಬಂದಿಗಳಿಗೆ ಈಗಾಗಲೆ ಎರಡು ಬಾರಿ ತರಬೇತಿ ನೀಡಲಾಗಿದೆ ಎಂದರು.
ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್: ಕ್ಲಿಷ್ಟ ಮತಗಟ್ಟೆಗಳನ್ನೊಳಗೊಂಡಂತೆ ಈ ಬಾರಿ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಒಟ್ಟು 939 ಮತಗಟ್ಟೆಗಳಲ್ಲಿ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 164 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು, ಉಳಿದ ಮತಗಟ್ಟೆಗಳಲ್ಲಿ ಸಿ.ಪಿ.ಎಂ.ಎಫ್‌ಗಳನ್ನು ನಿಯೋಜಿಸಲಾಗಿದೆ. ಮತದಾನದ ದಿನವಾದ ಮೇ. 10ರ ಸಂಜೆ 6 ಗಂಟೆಯ ವರೆಗೆ ಸಮೀಕ್ಷೆ ನಡೆಸುವುದನ್ನು ನಿಷೇಧಿಸಲಾಗಿದೆ.
ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್: ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯವನ್ನು ಆಯಾ ವಿಧಾನಸಭಾ ಮತಕ್ಷೇತ್ರಗಳ ಕೇಂದ್ರ ಸ್ಥಾನಗಳಲ್ಲಿ ಮಾಡಲಾಗುತ್ತದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕಾಯ್ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು ಕಾಲೇಜಿನಲ್ಲಿ, ಮೂಡುಬಿದರೆಯ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಮಹಾವೀರ ಕಾಲೇಜಿನಲ್ಲಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಕಾರ್ಯ ಪಾಂಡೇಶ್ವರದ ರೋಸಾರಿಯೋ ಶಾಲೆಯಲ್ಲಿ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಉರ್ವಾದ ಕೆನರಾ ಶಾಲೆಯ ಆವರಣದಲ್ಲಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಕಾರ್ಯ ಕೋಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಮಾನವೀಕ ಶಾಸ್ತç ಅಧ್ಯಯನ ವಿಭಾಗದಲ್ಲಿ, ಬಂಟವಾಳ ಕ್ಷೇತ್ರಕ್ಕೆ ಸಂಬAಧಿಸಿದ್ದು, ಇನ್‌ಪ್ಯಾಂಟ್ ಜೀಸಸ್ ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮ ಶಾಲೆಯಲ್ಲಿ, ಪುತ್ತೂರು ಕ್ಷೇತ್ರದ್ದು ವಿವೇಕಾನಂದ ಇಂಗ್ಲಿಷ್ ಮಿಡಿಯಂ ಶಾಲೆಯಲ್ಲಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕಾರ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಲಿದೆ ಎಂದರು.
ಎನ್‌ಐಟಿಕೆಯಲ್ಲಿ ಮತ ಎಣಿಕಾ ಕೇಂದ್ರ: ಮತದಾನ ಪೂರ್ಣಗೊಂಡ ನಂತರ ಮತದಾನವಾದ ವಿದ್ಯುನ್ಮಾನ ಮತಯಂತ್ರಗಳನ್ನು ಹಾಗೂ ಮಹತ್ವದ ದಾಖಲೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮತ ಎಣಿಕೆ ಕೇಂದ್ರವಾದ ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದ್ದು, ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಈ ದಾಖಲೆಯಿದ್ದರೆ ಮತ ಚಲಾಯಿಸಬಹುದು: ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಮತ ಚಲಾಯಿಸಲು ಈ ಕೆಳಕಂಡ ಪರ್ಯಾಯ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. ಮತದಾರ ಆಧಾರ ಕಾರ್ಡ್, ಎಂ.ಎನ್.ಆರ್.ಇ.ಜಿ.ಎ. ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ನೀಡಿರುವ ಭಾವಚಿತ್ರ ಇರುವ ಪಾಸ್ ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆ ಕಾರ್ಡ್, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್), ಪ್ಯಾನ್ ಕಾರ್ಡ್, ಎನ್.ಪಿ.ಆರ್ ನ ಅಡಿಯಲ್ಲಿ ಆರ್.ಜಿ.ಐ. ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತೀಯ ಪಸ್‌ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ (ಕೇಂದ್ರ, ರಾಜ್ಯ ಸರ್ಕಾರ, ಪಿಎಸ್‌ಯು ಗಳ ಗುರುತಿನ ಚೀಟಿ) ಎಂ.ಪಿ, ಎಂ.ಎಲ್.ಎ, ಎಂ.ಎಲ್.ಸಿ. ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ ದಾಖಲೆ.
ಮತದಾರರು ವೋಟರ್ ಸ್ಲಿಪ್ ಜೊತೆಗೆ ಎಪಿಕ್ ಕಾರ್ಡ್ ಅಥವಾ ಮೇಲೆ ತಿಳಿಸಿದ ಪರ್ಯಾಯ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಕಡ್ಡಾಯವಾಗಿ ಮತಗಟ್ಟೆಯಲ್ಲಿ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ128ರಲ್ಲಿ ಸೂಚಿಸಿರುವಂತೆ ಮತದಾನದ ಗೌಪ್ಯತೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಮತದಾನದ ದಿನದಂದು ಮತಗಟ್ಟೆಯ 100 ಮೀ. ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.
ವಶಪಡಿಸಿಕೊಂಡ ಸಾಮಗ್ರಿಗಳ ವಿವರ: ಚುನಾವಣೆ ನೀತಿ ಸಂಹಿತೆ ಘೊಷಣೆಯ ಬಳಿಕ ಈವರೆಗೆ ಜಿಲ್ಲೆಯಲ್ಲಿ 18.40 ಲಕ್ಷ ರೂ.ಗಳ ಡ್ರಗ್ಸ್, 22 ಲಕ್ಷ ರೂ.ಗಳ ಮೌಲ್ಯದ ಮದ್ಯ, 4.50 ಲಕ್ಷ ರೂ. ಬೆಲೆಯ ಚುನಾವಣಾ ಸಾಮಗ್ರಿಗಳು, 1.92 ಕೋಟಿ ರೂ. ಹಣದ ಪೈಕಿ ದಾಖಲೆಗಳನ್ನು ಪರಿಶೀಲಿಸಿದ ನಂತರ 13.55 ಲಕ್ಷ ರೂ.ಗಳ ಹಣವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಕುಮಾರ್ ಜೈನ್ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ. ಗೋಷ್ಠಿಯಲ್ಲಿದ್ದರು.