ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ : ಯಶ್ಪಾಲ್ ಸುವರ್ಣ

Spread the love

ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ : ಯಶ್ಪಾಲ್ ಸುವರ್ಣ

ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವಗುರು ವಾಗಿಸುವ ಸಂಕಲ್ಪ ಮಾಡಿರುವ ಸಂದರ್ಭದಲ್ಲಿ ಪುಷ್ಪಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಈ ಬಾರಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ಕಲಿಯುತ್ತಿರುವ ಸುಮಾರು 17,000 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಪೆನ್ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಯೋಗ,ಈಜು ತರಬೇತಿ, ಸಂಗೀತ ದಂತಹ ಪಠ್ಯೇತರ ಚಟುವಟಕೆಗಳಿಗೂ ಪ್ರೋತ್ಸಾಹಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಡಾ. ಜಿ. ಶಂಕರ್ ಸರಕಾರಿ ಮಹಿಳೆಯರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ| ಭಾಸ್ಕರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಮ್ಮ ಫೌಂಡೇಶನ್ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಿದ ಶಾಸಕರ ಸಾಮಾಜಿಕ ಬದ್ಧತೆ ಸರ್ವರಿಗೂ ಮಾದರಿ ಎಂದರು.

ಸಮಾರಂಭದಲ್ಲಿ ನಗರಸಭಾ ಸದಸ್ಯರಾದ  ರಶ್ಮಿ ಸಿ. ಭಟ್, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ   ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ  ಅಶೋಕ್ ಕಾಮತ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ   ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ತಜ್ಞರಾದ  ವಿಶ್ವನಾಥ ಬಾಯರಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಮಾ ಎಸ್., ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ  ಇಂದಿರಾ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷರಾದ  ಯೋಗೀಶ್ ಕೋಟ್ಯಾನ್, ಉಪಾಧ್ಯಕ್ಷರಾದ  ಶೇಕ್ ಆಸೀಫ್ ಹಾಗೂ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


Spread the love