ಸಕಲ ಸರಕಾರಿ ಗೌರವದೊಂದಿಗೆ ಮಾಜಿ ಶಾಸಕ ಗೋಪಾಲ ಭಂಡಾರಿಗೆ ಅಂತಿಮ ವಿದಾಯ

ಸಕಲ ಸರಕಾರಿ ಗೌರವದೊಂದಿಗೆ ಮಾಜಿ ಶಾಸಕ ಗೋಪಾಲ ಭಂಡಾರಿಗೆ ಅಂತಿಮ ವಿದಾಯ

ಉಡುಪಿ: ಗುರುವಾರ ನಿಧನರಾದ ಕಾರ್ಕಳದ ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರಿಗೆ ಇಂದು ಕಾರ್ಕಳ ಹೆಬ್ರಿಯ ಅವರ ಸ್ವಗೃಹದ ಜಮೀನಿನಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಅಂತಿಮ ವಿಧಿವಿಧಾನ ಸಲ್ಲಿಸುವ ಮೊದಲು ಮೂರು ಸುತ್ತು ಕುಶಾಲು ತೋಪು ಹಾರಿಸುವ ಮೂಲಕ ಗೌರವದ ವಿದಾಯ ಸಲ್ಲಿಸಲಾಯಿತು.

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ಸರಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು.

ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಪ್ರತಾಪ್ ಚಂದ್ರ ಶೆಟ್ಟಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ , ಕಾರ್ಕಳ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹಾಲಾಡಿ ಶ್ರಿನೀವಾಸ ಶೆಟ್ಟಿ, ಸುನಿಲ್ ಕುಮಾರ್, ರಾಜೇಗೌಡ , ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಯು.ಆರ್. ಸಭಾಪತಿ, ಎ.ಜಿ.ಕೋಡ್ಗಿ, , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ , ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸರಕಾರಿ ಇಲಾಖೆಯ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.

ಇದಕ್ಕೂ ಮೊದಲು ಕಾರ್ಕಳದ ಕಿಸಾನ್ ಭವನದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ, ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ ಅವರು ಅಂತಿಮ ನಮನ ಸಲ್ಲಿಸಿದರು.